ಬೆಂಗಳೂರಿನ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 25ನೇ ಸಂಸ್ಥಾಪನಾ ದಿವಸದ ಅಂಗವಾಗಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಬೆಂಗಳೂರು – ಮೇ 30, 2020: ಬೆಂಗಳೂರಿನ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 25ನೇ ಸಂಸ್ಥಾಪನಾ ದಿವಸದ ಅಂಗವಾಗಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಇಚ್ಛಿಸಲಾಗಿತ್ತು, ಈಗ ಕಾರ್ಯಕ್ರಮವನ್ನು ಸನ್ಮಾನ್ಯ ಪ್ರಧಾನಮಂತ್ರಿಯವರೇ ಉದ್ಘಾಟಿಸುತ್ತಿರುವುದು ನಮಗೆಲ್ಲಾ ಅತ್ಯಂತ ಹೆಮ್ಮೆಯ ಸಂಗತಿ ಎಂದು ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್ ಅವರು ಕೊರೋನ ವಿರುದ್ಧದ ಸಮರದಲ್ಲಿ ವೈದ್ಯಕೀಯ, ತಂತ್ರಜ್ಞಾನ ಹಾಗೂ ಕೈಗಾರಿಕೋದ್ಯಮಿಗಳ ಸಹಯೋಗದೊಂದಿಗೆ ಕೋವಿಡ್ ವಿರುದ್ಧ ನೂತನ ಆವಿಷ್ಕಾರಗಳನ್ನು ಕೈಗೊಳ್ಳಬೇಕೆಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ನಮ್ಮ ರಾಜ್ಯದ ಪ್ರತಿಷ್ಠಿತ ಸಂಸ್ಥೆಯಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಇಂತಹ ನೂತನ ಪ್ರಯೋಗಗಳನ್ನು ಮಾಡುತ್ತಿದೆ. ಅದರಂತೆ ಐಐಐಟಿ, ಐಐಎಂ, ಎಲ್ಲಾ ವೈದ್ಯಕೀಯ ಕಾಲೇಜಿನ ಪರಿಣಿತ ವೈದ್ಯರುಗಳು ಸೇರಿದಂತೆ ಆಯಾ ರಂಗಗಳಲ್ಲಿನ ಹೆಸರಾಂತ ತಜ್ಞರುಗಳ ಸಹಯೋಗದೊಂದಿಗೆ ನೂತನ ಆವಿಷ್ಕಾರಕ್ಕೆ ಪ್ರಯತ್ನಿಸಲಾಗುತ್ತಿದೆ. RGUHS ಇದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸಿ ಕೊಡಲು ಮುಂದಾಗಿದೆ ಎಂದು ತಿಳಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಜೂನ್ 1ನೇ ತಾರೀಕು ತನ್ನ 25ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದ್ದು, ಇದು ದೇಶದಲ್ಲೇ ಅತ್ಯಂತ ದೊಡ್ಡ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವಾಗಿದೆ. 800 ಸಂಸ್ಥೆಗಳನ್ನೊಳಗೊಂಡ ಈ ವಿಶ್ವವಿದ್ಯಾಲಯದಲ್ಲಿ 2.5 ಲಕ್ಷ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. 23,000 ಬೋಧಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು ಅವರೆಲ್ಲರೂ ಕೊರೋನ ವಿರುದ್ಧದ ಸಮರದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದ ಸಚಿವರು, ಇದೇ ಸಂದರ್ಭದಲ್ಲಿ ಕೋವಿಡ್ ವಿರುದ್ಧ ಇಂತಹ ನೂತನ ಪ್ರಯೋಗಗಳಿಗೆ ಮುಂದಾಗಿರುವುದು ಬಹಳ ಅರ್ಥಪೂರ್ಣವಾಗಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನ ಕುರಿತಾದ ಇತ್ತೀಚಿನ ಮಾಹಿತಿ ನೀಡಿದ ಸಚಿವ ಸುಧಾಕರ್ ಅವರು ಕೋವಿಡ್ ವೈರಾಣುವನ್ನು ಹೆಚ್ಚು ವೈಭವೀಕರಿಸಿ, ಜನರಲ್ಲಿ ಭಯ-ಆತಂಕ ಮೂಡಿಸುವ ರೀತಿಯಲ್ಲಿ ಪ್ರತಿಬಿಂಬಿಸಬಾರದೆಂದು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ವೈರಾಣುವನ್ನು ಸಾಕಷ್ಟು ಮಟ್ಟಿಗೆ ನಿಯಂತ್ರಿಸಲಾಗಿದ್ದು, ಕೊರೋನ ಜೊತೆಯಲ್ಲಿ ನಾವು ಜೀವನ ನಡೆಸಬೇಕಾಗಿರುವುದು ಅನಿವಾರ್ಯವಾಗಿದೆ. ಅದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಅದನ್ನು ನಿಗ್ರಹಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.