f3b9d6dd 482c 43d4 97fe a792a0c6b585

ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ: ಮಕ್ಕಳ ಸುರಕ್ಷತೆ, ಆತ್ಮವಿಶ್ವಾಸ ಮುಖ್ಯ: ಸಚಿವ ಸುರೇಶ ಕುಮಾರ್

STATE

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು

ಬೆಳಗಾವಿ, ಜೂನ್ 2(ಕರ್ನಾಟಕ ವಾರ್ತೆ): ಕೊರೊನಾ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶ್ ಕುಮಾರ್ ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಜೂ. 2) ನಡೆದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಧನೆ ಮಾಡಬೇಕು ಎಂಬ ಮಕ್ಕಳ ಕನಸಿಗೆ ಪರೀಕ್ಷೆ ಮೂಲಕ ಪೋಷಿಸುವ ಅಗತ್ಯವಿದೆ. ಮಕ್ಕಳ ಭವಿಷ್ಯದ ಹಾಗೂ ಹಿತದ ದೃಷ್ಟಿಯಿಂದ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸ ಬೆಳೆಸಲು ಮುಂದಾಗುವಂತೆ ಶಿಕ್ಷಕ ಸಮುದಾಯಕ್ಕೆ ತಿಳಿಸಿದರು.

ಎಲ್ಲರಿಗೂ ಸ್ಮಾರ್ಟ್ ಫೋನ್ ಅಥವಾ ನೆಟವರ್ಕ್ ಸಿಗದಿರುವುದರಿಂದ ಮನೆ ಮನೆಗೆ ತೆರಳಿ ಪಾಠ ಮಾಡುವುದರ ಜತೆಗೆ ಗ್ರಾಮದ ದೊಡ್ಡ ಮನೆ ಅಥವಾ ಕಟ್ಟಡಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು “ವಠಾರ ಶಾಲೆ” ನಡೆಸುವ ಬಗ್ಗೆ ಕಾರ್ಯಕ್ರಮ ರೂಪಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಸುರೇಶ್ ಕುಮಾರ್ ಸಚಿವರು ಸಲಹೆ ನೀಡಿದರು.

ವಿಶೇಷವಾದ ಸನ್ನಿವೇಶದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕಿರುವುದರಿಂದ ರಾಜ್ಯದ ಎಲ್ಲ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ ಎಂದರು. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ ನ್ಯಾಯಾಲಯವು ಪರೀಕ್ಷೆ ನಡೆಸಬಹುದು ಎಂದು ಅಭಿಪ್ರಾಯಪಟ್ಟಿದೆ. ಅದೇ ರೀತಿ ಕೇಂದ್ರ ಸರ್ಕಾರ ಕೂಡ ಹಸಿರುನಿಶಾನೆ ತೋರಿಸಿದೆ ಎಂದರು.

ಸಮುದಾಯ ರೆಡಿಯೋ, ವಾಟ್ಸಾಪ್ ಮತ್ತಿತರ ಮಾರ್ಗಗಳ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಿರಂತರ ಬೋಧನೆ ಮತ್ತು ಕಲಿಕೆ ಪ್ರಕ್ರಿಯೆ ನಡೆದಿದೆ. ಇದೇ ರೀತಿ ಇನ್ನೂ ಹದಿನೈದು ದಿನಗಳ ಕಾಲ ಈ ಪ್ರಕ್ರಿಯೆ ಮುಂದುವರಿಸಿ ಮಕ್ಕಳಲ್ಲಿ ಆತ್ಮವಿಶ್ವಾಸ ಮಾಡಿಸಬೇಕು ಎಂದು ಶಿಕ್ಷಕರಿಗೆ ತಿಳಿಸಿದರು.

ಪರೀಕ್ಷಾ ಕೇಂದ್ರಕ್ಕೆ ಉಚಿತ ಸ್ಯಾನಿಟೈಸರ್ ಪೂರೈಕೆ:

ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಉಚಿತವಾಗಿ ಸ್ಯಾನಿಟೈಸರ್ ಪೂರೈಸಲಾಗಿದೆ. ಪರೀಕ್ಷಾ ಕೇಂದ್ರದ ಎಲ್ಲ ಶಿಕ್ಷಕರು, ಸಿಬ್ಬಂದಿ ಕೂಡ ಕೈಗವಸ ಹಾಕಿಕೊಳ್ಳಬೇಕು. ಪ್ರತಿ ಇನ್ನೂರು ಮಕ್ಕಳಿಗೆ ಒಂದು ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡುವುದು ಸೇರಿದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಆರೋಗ್ಯ, ಸಾರಿಗೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಜತೆಗೆ ಸಭೆ ನಡೆಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಲು ಕ್ರಮ‌ಕೈಗೊಳ್ಳಲಾಗುವುದು ಎಂದರು.

587d5f71 d0cf 4efe aae0 bd6f345d7da2

ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆಯಾಗದಿರಲಿ:

ವಲಸೆ ಕಾರ್ಮಿಕರ ಮಕ್ಕಳಿಗೆ ಅವರು ಇರುವ ಗ್ರಾಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಕಂಟೈನ್ಮೆಂಟ್ ಝೋನ್ ನಲ್ಲಿ ಪರೀಕ್ಷಾ ಕೇಂದ್ರ ಇರದಂತೆ ನೋಡಿಕೊಳ್ಳಬೇಕು.

ಪರೀಕ್ಷೆಯ ಪಾವಿತ್ರ್ಯತೆ ಅಥವಾ ಗಾಂಭಿರ್ಯತೆಗೆ ಕುಂದು ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದರು. ಮಕ್ಕಳಲ್ಲಿ‌ ಕಲಿಕೆಯ ಗುಣಮಟ್ಟ ವೃದ್ಧಿಗೊಳಿಸಲು ಶಿಕ್ಷಕರು ಕೈಗೊಂಡ ವಿಶೇಷ ಕಾರ್ಯಕ್ರಮಗಳ ಬಗ್ಗೆ ಸಚಿವರು ಮಾಹಿತಿಯನ್ನು ಪಡೆದುಕೊಂಡರು. ಪರೀಕ್ಷಾ ಪ್ರವೇಶ ಪತ್ರ ವಿತರಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಕೆಲ ನಿರ್ದಿಷ್ಟ ಸ್ಥಳಗಳಲ್ಲಿ ಸಮುದಾಯ ಭವನ ಮತ್ತಿತರ ಕಡೆಗಳಲ್ಲಿ ಗುಂಪು ಅಧ್ಯಯನಕ್ಕೆ ಅನುಕೂಲ ಆಗುವಂತೆ ರಾತ್ರಿ ವೇಳೆ ಪಾಠ ಮಾಡಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ವಿವರಿಸಿದರು.

ಮಳೆಗಾಲ ಆರಂಭಗೊಂಡಿರುವುದರಿಂದ ಓದಲು ತೊಂದರೆಯಾಗುವ ಮಕ್ಕಳಿಗೆ ವಸತಿನಿಲಯದ ಸೌಲಭ್ಯ ಕಲ್ಪಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಅದೇ ರೀತಿ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಶುಚಿತ್ವ ಕಡೆಗೆ ಕೂಡ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಡಾ.ರಾಜೇಂದ್ರ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಕೊರೊನಾ ಹಿನ್ನೆಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ  ಅನುಕೂಲ ಕಲ್ಪಿಸಲು ಗ್ರಾಮಗಳ ಗ್ರಂಥಾಲಯಗಳನ್ನು “ಓದುವ ಮನೆ”ಯಾಗಿ ಪರಿವರ್ತಿಸುವ ಸಲಹೆ ನೀಡಿದರು. ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಸಿದ್ದಲಿಂಗಯ್ಯ ಹಿರೇಮಠ, ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ವ್ಯವಸ್ಥೆಯಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಿದ್ದಾರೆ ಎಂದು ಹೇಳಿದರು.

ಹೆಚ್ಚುವರಿ ಕೊಠಡಿ; ಪರ್ಯಾಯ ವ್ಯವಸ್ಥೆ:

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ಸಂದರ್ಭದಲ್ಲಿ ಅಗತ್ಯಬಿದ್ದರೆ ಎರಡು ಹೆಚ್ಚುವರಿ ಕೊಠಡಿಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಜಾನನ ಮನ್ನಿಕೇರಿ ತಿಳಿಸಿದರು.

ಪರೀಕ್ಷೆ ಸಂದರ್ಭದಲ್ಲಿ ಯಾವುದಾದರೂ ಶಾಲೆಯ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾಗಿ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿದರೆ ಪರ್ಯಾಯ ವ್ಯವಸ್ಥೆಯನ್ನು ಕೂಡ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಪ್ರತಿದಿನ ಪರೀಕ್ಷೆ ಆರಂಭಕ್ಕಿಂತ ಮುಂಚೆ ಹಾಗೂ ನಂತರ ಕೊಠಡಿಯನ್ನು ಶುಚಿಗೊಳಿಸುವುದು ಮತ್ತು ಪರೀಕ್ಷೆಗೆ ಹಾಜರಾಗುವ ಎಲ್ಲ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಿಗೆ ವಿವರಿಸಿದರು.

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಕೆಡೆಟ್ ಗಳನ್ನು ಸ್ವಯಂ ಸೇವಕರಾಗಿ ನಿಯೋಜಿಸಲು ಉದ್ದೇಶಿಸಲಾಗಿದೆ ಎಂದು ಚಿಕ್ಕೋಡಿ ಡಿಡಿಪಿಐ ಮನ್ನಿಕೇರಿ ತಿಳಿಸಿದರು. ಪರೀಕ್ಷೆ ಸಂದರ್ಭದಲ್ಲಿ ಮಕ್ಕಳಿಗೆ ಅಗತ್ಯ ಸಾರಿಗೆ ಸೌಲಭ್ಯ ಒದಗಿಸುವ ಬಗ್ಗೆ ಸಾರಿಗೆ ಇಲಾಖೆ ಜತೆ ಚರ್ಚೆ ನಡೆಸಲಾಗುತ್ತಿದೆ ಎಂದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಸಿದ್ಧತೆ ಕುರಿತು ಹಾಗೂ ಪರೀಕ್ಷೆ ಸಂದರ್ಭದಲ್ಲಿ ತೆಗೆದುಕೊಳ್ಳಲಿರುವ ಕ್ರಮಗಳ ಕುರಿತು ಡಿಡಿಪಿಐ ಎ.ಬಿ‌.ಪುಂಡಲೀಕ ಮಾಹಿತಿಯನ್ನು ನೀಡಿದರು. ಪರೀಕ್ಷಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಪೂರೈಕೆ ಹಾಗೂ ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡುವ ಬಗ್ಗೆ ವಿವರಿಸಿದರು. ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.