97ce3c26 db34 4b07 a399 cf32f79cb51d

ಖಾಸಗಿ ಶಾಲೆ: ಆನ್‌ ಲೈನ್‌ ಶಿಕ್ಷಣಕ್ಕೆ ಬ್ರೇಕ್‌ ಹಾಕಿದ ಸರ್ಕಾರ…!

STATE Genaral

ಖಾಸಗಿ ಶಾಲೆಗಳು ಆನ್‌ ಲೈನ್‌ ಶಿಕ್ಷಣದ ಹೆಸರಿನಲ್ಲಿ ಪೋಷಕರಿಂದ ವಸೂಲಿಗೆ ಇಳಿದಿದ್ದರ ಪರಿಣಾಮವಾಗಿ, ಎಚ್ಚೆತ್ತ ಸರ್ಕಾರ ಆನ್‌ ಲೈನ್‌ ಶಿಕ್ಷಣಕ್ಕೆ ಬ್ರೇಕ್‌ ಹಾಕಿದೆ , ಒಂದರಿಂದ ಐದನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣಕ್ಕೆ ಬ್ರೇಕ್ , ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ : ತಜ್ಞರ ಸಮಿತಿ ರಚನೆ- ಸುರೇಶ್‌ ಕುಮಾರ್‌

ಬೆಂಗಳೂರು ಜೂನ್‌ ೧೦: ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲೂ ಎಲ್‌ಕೆಜಿಯಿಂದ ಐದನೇ ತರಗತಿಗಳ ವಿದ್ಯಾರ್ಥಿಗಳಿಗೆ ಆನ್‌ ಲೈನ್‌ ಬೋಧನೆ ಮಾಡುತ್ತಿದ್ದರೆ, ಅದನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.
ಆನ್‌ಲೈನ್‌ ಶಿಕ್ಷಣಕ್ಕೆ ಸಂಬಂಧಿಸಿದಂತೆ ಬುಧವಾರ ನಾಡಿನ ಹಿರಿಯ ಶಿಕ್ಷಣ ತಜ್ಞರು, ಮಾನಸಿಕ ಆರೋಗ್ಯ ವಿಭಾಗದ ಪರಿಣಿತರು, ಖಾಸಗಿ ವಿದ್ಯಾಸಂಸ್ಥೆಗಳ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಶೈಕ್ಷಣಿಕ ಹಾಗೂ ಮಕ್ಕಳ ಸುಧಾರಣೆ ವಿಷಯದ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸುದೀರ್ಘ ಸಮಾಲೋಚನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಾಥಮಿಕ ಹಂತದಲ್ಲಿ ರಾಜ್ಯದ ಯಾವುದೇ ಶಾಲೆಯಲ್ಲೇ ಆಗಲಿ ಆನ್‌ಲೈನ್‌ ಬೋಧನೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹಾಗೆಯೇ ಆನ್‌ಲೈನ್‌ ಶಿಕ್ಷಣದ ಹೆಸರಿನಲ್ಲಿ ಶುಲ್ಕ ವಸೂಲಿ ಮಾಡುವುದು ಕಂಡು ಬಂದರೆ ಅಂತಹ ಶಾಲೆಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ:
ಇನ್ನು ಆರರಿಂದ ೧೦ವರೆಗಿನ ಉನ್ನತ ತರಗತಿಗಳಲ್ಲಿ ಆನ್‌ಲೈನ್‌ ಶಿಕ್ಷಣದ ಸಾಧಕ ಬಾಧಕಗಳ ಕುರಿತು ಚರ್ಚಿಸಿ ಮತ್ತು ಆ ಕುರಿತಂತೆ ಮಾರ್ಗಸೂಚಿಗಳನ್ನು ರೂಪಿಸಲು ಹಿರಿಯ ಶಿಕ್ಷಣ ತಜ್ಞರ ಸಮಿತಿ ರಚಿಸಲಾಗಿದೆ. ಅಂತೆಯೇ ಎಲ್‌ಕೆಜಿ ಯಿಂದ ಐದನೇ ತರಗತಿವರೆಗೆ ಆನ್‌ಲೈನ್‌ ಹೊರತುಪಡಿಸಿ ತಂತ್ರಜ್ಞಾನಾಧಾರಿತವಾದ ಬೋಧನೆಯನ್ನು ಅಳವಡಿಸಿಕೊಳ್ಳುವ ಕುರಿತಂತೆ ಸಹ ಈ ಸಮಿತಿ ಸಾಧಕಬಾಧಕಗಳನ್ನು ಪರಿಶೀಲಿಸಿ ವರದಿ ಸಲ್ಲಿಸಲಿದ್ದು, ಸಮಿತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಪ್ರೊ. ಎಂ.ಕೆ. ಶ್ರೀಧರ್‌ , ಹಿರಿಯ ಶಿಕ್ಷಣ ತಜ್ಞರಾದ ಪ್ರೊ. ಗುರುರಾಜ ಕರ್ಜಗಿ, ಡಾ. ವಿ.ಪಿ. ನಿರಂಜನಾರಾಧ್ಯ, ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಪ್ರತಿನಿಧಿಗಳಾದ ಹೃಷಿಕೇಶ್‌, ನಿಮ್ಹಾನ್ಸ್‌ ಸಂಸ್ಥೆಯ ಮಕ್ಕಳ ಮಾನಸಿಕ ತಜ್ಞರು, ಅರ್ಲಿ ಚೈಲ್ಡ್‌ ಹುಡ್‌ ಸಂಘಟನೆಯ ಪ್ರತಿನಿಧಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇರುತ್ತಾರೆ ಎಂದು ಸಚಿವರು ತಿಳಿಸಿದರು.

ಸಮಿತಿ ಶಿಕ್ಷಣದಲ್ಲಿ ತಂತ್ರಜ್ಞಾನವನ್ನು ಯಾವ ರೀತಿ ಬಳಸಿಕೊಳ್ಳಬೇಕು, ತರಗತಿ ಇಲ್ಲದಿರುವಾಗ ಮಕ್ಕಳ ಶಿಕ್ಷಣ ನಿರಂತರತೆಗೆ ಮಾತ್ರ ಇದನ್ನು ಎಷ್ಟು ಬಳಕೆ ಮಾಡಬೇಕು, ರಜಾ ಅವಧಿಯಲ್ಲಿ ಮಕ್ಕಳ ಜ್ಞಾನಾರ್ಜನೆಗೆ ಪೂರಕವಾಗಿ ಹೇಗೆ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಮತ್ತು ಕೋವಿಡ್‌ನಂತಹ ಸಂದರ್ಭದಲ್ಲಿ ಸಾಂಪ್ರದಾಯಿಕ ತರಗತಿಗಳಿಗೆ ಪರ್ಯಾಯವೆನ್ನುವ ಭಾವನೆಯನ್ನು ಮೂಡಿಸದೇ ಅವರ ಕಲಿಕೆಗೆ ಪ್ರೇರೇಪಣೆಯಾಗುವಂತೆ ಮಾತ್ರವೇ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬೇಕು, ವಿಶೇಷವಾಗಿ ನಮ್ಮ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿ/ ಪೋಷಕರ ಸಾಮಾಜಿಕ ಸ್ಥಿತಿಗತಿಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ವಿದ್ಯಾರ್ಥಿ ಕಲಿಕೆಯಿಂದ ವಂಚಿತವಾಗದೇ ಮುಖ್ಯವಾಹಿನಿಯಲ್ಲಿ ಒಳಗೊಳ್ಳುವುದು ಸೇರಿದಂತೆ ಈ ಪರ್ಯಾಯ ಬೋಧನಾ ಕ್ರಮದ ಸಾಧಕ ಬಾಧಕಗಳೊಂದಿಗೆ ಮಾರ್ಗಸೂಚಿಗಳನ್ನು ರೂಪಿಸಿ ಈ ಸಮಿತಿಯು 10 ದಿನಗಳಲ್ಲಿ ವರದಿ ನೀಡಲಿದೆ ಎಂದು ಸುರೇಶ್‌ ಕುಮಾರ್‌ ತಿಳಿಸಿದರು.

ಶುಲ್ಕ ಹೆಚ್ಚಳ ಮಾಡಿದ ಶಾಲೆಗಳ ವಿರುದ್ಧ ಕ್ರಮ:
ಇದೇ ಸಂದರ್ಭದಲ್ಲಿ ಈ ಶೈಕ್ಷಣಿಕ ಸಾಲಿಗೆ ಬೋಧನಾ ಶುಲ್ಕ ಹೆಚ್ಚಳ ಮಾಡಬಾರದು ಎಂದು ಈಗಾಗಲೇ ಶಿಕ್ಷಣ ಇಲಾಖೆ ಸ್ಪಷ್ಟವಾದ ಸುತ್ತೋಲೆ ಹೊರಡಿಸಿದ್ದು, ಇದನ್ನು ಉಲ್ಲಂಘಿಸಿದ ಶಾಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಲು ಇಲಾಖಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.