ಕಾಲೇಜು ವಿದ್ಯಾರ್ಥಿಗಳ ಕಲಿಕಾ ನಿರ್ವಹಣೆಗಾಗಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್/ಪಿ.ಸಿ ವಿತರಣೆ : ಬಿ.ಎಸ್. ಯಡಿಯೂರಪ್ಪ
ಬೆಂಗಳೂರು, ಜೂನ್ 23 (ಕರ್ನಾಟಕ ವಾರ್ತೆ): ಕೋವಿಡ್ -19 ರ ಎರಡನೇ ಅಲೆಯ ಸಂದರ್ಭದಲ್ಲಿ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಪ್ರಥಮ ಬಾರಿಗೆ ಡಿಜಿಟಲ್ ಕಲಿಕಾ ಯೋಜನೆಯ ಮೊದಲ ಹಂತದಲ್ಲಿ 27.77 ಕೋಟಿ ರೂ ವೆಚ್ಚದಲ್ಲಿ ರಾಜ್ಯದ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್/ಪಿ.ಸಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಅವರು ಇಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಧಾನ ಸೌಧ ಬ್ಯಾಂಕ್ವೆಂಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ಸಾಂಕೇತಿಕವಾಗಿ ಕೆಲವು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್/ಪಿ.ಸಿ ವಿತರಿಸಿ ಮಾತನಾಡಿದರು.
ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು 2500 ಸ್ಮಾರ್ಟ್ ತರಗತಿಗಳ ಸ್ಥಾಪನೆ ಜೊತೆಗೆ ಪ್ರತಿ ಸ್ಮಾರ್ಟ್ ತರಗತಿಯಲ್ಲಿ ಮಲ್ಟಿ ಮೀಡಿಯಾ ಪ್ರೊಜೆಕ್ಟರ್, ಯುಪಿಎಸ್, ಅನ್ಡ್ರಾಯಿಡ್ ಬಾಕ್ಸ್, ವೈ-ಫೈ ಅಳವಡಿಸಲಾಗುವುದು. “Chalk & Talk” Video, Audio, Animations Images, Text ನಂತಹ ಬಹುಮಾಧ್ಯಮಗಳ ಬಳಕೆ ಮಾಡಲಾಗುವುದು ಎಂದರು.
ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ತಾರತಮ್ಯವಾಗದೆ ಕಲಿಕೆ ನಿರಂತರವಾಗಿ ಮುಂದುವರಿಯಬೇಕು ಹಾಗೂ ಉನ್ನತ ಶಿಕ್ಷಣದಿಂದ ವಂಚಿತರಾಗದೆ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಸರ್ಕಾರದಿಂದ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದರು.
ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ಕೌಶಲ್ಯಾಭಿವೃಧ್ಧಿ ಹಾಗೂ ಜೀವನೋಪಾಯ, ಐ.ಟಿ-ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು ಮಾತನಾಡಿ, ಕೋವಿಡ್ ಸಂದರ್ಭದಲ್ಲೂ ಕಲಿಕೆ ಮುಂದುವರಿಯಬೇಕು ಎನ್ನುವ ದೃಷ್ಟಿಯಿಂದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಡಿಜಿಟಲ್ ಕಲಿಕಾ ಯೋಜನೆಯನ್ನು ಜಾರಿಗೆ ತರಲಾಗಿದೆ.
ಉನ್ನತ ಶಿಕ್ಷಣದಲ್ಲಿ ಮುಂಚೂಣಿಯಲ್ಲಿರುವ ತಂತ್ರಜ್ಞಾನದ ಅವಿಷ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಉಪಯೋಗವಾಗಬೇಕು. ಈಗಿನ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಯನ್ನು ಕಸಿದುಕೊಂಡಂತೆ ಆಗಬಾರದು ಎನ್ನುವ ದೃಷ್ಟಿಯಿಂದ ಆಧುನಿಕ ಉಪಕರಣಗಳನ್ನು ಅಳವಡಿಸಿಕೊಂಡು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.
ಸದೃಢ ಸಮಾಜ ನಿರ್ಮಾಣಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇಕು. ಶಿಕ್ಷಣ ಕಲಿಕೆಯಿಂದ ರಾಜ್ಯ ದೊಡ್ಡ ಶಕ್ತಿಯಾಗಿ ಬೆಳೆಯಬೇಕೆಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಎನ್. ನಾಗಾಂಬಿಕಾದೇವಿ, ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್, ಬೋಧಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.