IMG 20210707 WA0012

Congress:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೀದಿಗಿಳಿದ ‘ಕೈ ‘ ಪಡೆ

Genaral STATE

*ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೀದಿಗಿಳಿದು ಕಾಂಗ್ರೆಸ್ ಪ್ರತಿಭಟನೆ*

ಪೆಟ್ರೋಲ್ ಹಾಗೂ ಡೀಸೆಲ್ ಇಂಧನಗಳ ಬೆಲೆ ಏರಿಕೆಯ ಕೇಂದ್ರ ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ಸೈಕಲ್ ಜಾಥಾ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಬಿಬಿಎಂಪಿ ಕಚೇರಿವರೆಗೂ ಸೈಕಲ್ ಜಾಥಾ ನಡೆಸಲು ಕಾಂಗ್ರೆಸ್ ತೀರ್ಮಾನಿಸಿತ್ತು. ಆದರೆ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆ ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಪ್ರತಿಭಟನೆ ವೇಳೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ‘ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುತ್ತಲೇ ಇದೆ. ಪೆಟ್ರೋಲ್ ನೂರರ ಗಡಿ ದಾಟಿದ್ದು, ಡೀಸೆಲ್ 100 ರ ಸಮೀಪಕ್ಕೆ ಬಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಸರ್ಕಾರಗಳು ಜನರ ಪರದಾಟ ನೋಡಿಕೊಂಡು ಕೈಕಟ್ಟಿ ಕುಳಿತುಕೊಂಡಿದೆ. ಬಡವರು, ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಡುಗೆ ಅನಿಲ ದರವೂ ದುಪ್ಪಟ್ಟಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಜನರು ಜೀವನ ನಡೆಸುವುದಾದರೂ ಹೇಗೆ?’ ಎಂದು ಪ್ರಶ್ನಿಸಿದರು.

ರಾಜ್ಯದ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಜಾಥ ನಡೆಸಲಾಗಿತ್ತು. ಚಾಮರಾಜಪೇಟೆಯಲ್ಲಿ ಪ್ರತಿಭಟನೆಗೆ ಮುಂದಾದ ಜಮೀರ್ ಅಹ್ಮದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ನಗರದ ಇತರೆ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

*ಮುಂದಿನ ಸಿಎಂ ವಿಚಾರ ಮುಗಿದ ಅಧ್ಯಾಯ:*

ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ನಲಪಾಡ್ ಅವರು ಕೊಟ್ಟ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಲೀಂ ಅಹ್ಮದ್ ಅವರು, ‘ಮುಂದಿನ ಸಿಎಂ ವಿಚಾರ ಮುಗಿದ ಅಧ್ಯಾಯ, ಪಕ್ಷದ ವರಿಷ್ಠರು ಈ ವಿಚಾರವಾಗಿ ಯಾರೂ ಮಾತನಾಡುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಹೋರಾಟ ಕೇವಲ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮಾತ್ರ. ಪಕ್ಷ ಅಧಿಕಾರಕ್ಕೆ ಬಂದಾಗ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ’ ಎಂದರು.