WhatsApp Image 2020 06 18 at 12.09.53

ಶಾಲಾ ಕಟ್ಟಡ, ದುರಸ್ತಿ, ಕೊಠಡಿ ನಿರ್ಮಾಣಕ್ಕೆ ಆಸ್ತು : ಜಿಲ್ಲಾ ಪಂಚಾಯತಿ

DISTRICT NEWS ತುಮಕೂರು

ತುಮಕೂರು (ಕ.ವಾ.) ಜೂ.20 : ಶಾಲಾ ಕೊಠಡಿ ನಿರ್ಮಾಣ, ಕಟ್ಟಡ ದುರಸ್ತಿ, ಮತ್ತಿತರ ಮೂಲಭೂತ ಸೌಕರ್ಯ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ ಅನುದಾನಕ್ಕೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯು ಅನುಮೋದನೆ ನೀಡಿದೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಚೌಡಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ತುಮಕೂರು ಶೈಕ್ಷಣಿಕ ಜಿಲ್ಲೆಗೆ 492.11 ಲಕ್ಷ ರೂ. ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ 301.48ಲಕ್ಷ ರೂ.ಗಳ ಅನುದಾನಕ್ಕೆ ಅವರು ಅನುಮೋದನೆ ನೀಡಲಾಯಿತು.
ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷೆ ಹಾಜರಾಗಲು ಅನುವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಆರೋಗ್ಯ, ಸಾರಿಗೆ ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಪ್ರತಿ ವಿದ್ಯಾರ್ಥಿಗೂ ಸ್ಯಾನಿಟೈಸರ್, ಮಾಸ್ಕ್ ಒದಗಿಸುವುದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

WhatsApp Image 2020 06 18 at 12.09.54
ಕೊರೋನಾ ರೋಗವನ್ನು ತಡೆಗಟ್ಟಲು ಮತ್ತು ನಿವಾರಣೆಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಜೊತೆಗೆ ಎಲ್ಲಾ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು ರೋಗದ ನಿಯಂತ್ರಣಕ್ಕಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಗ್ರಾಮೀಣ ಜನತೆಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಿದರು.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಶುಂಠಿ, ಪುದೀನ, ಮೆಣಸುಗಳನ್ನು ಪ್ರತಿದಿನ ಸೇವಿಸುವ ಆಹಾರದಲ್ಲಿ ಹೆಚ್ಚು ಹೆಚ್ಚು ಬಳಸುವುದು, ದಿನಕ್ಕೆ ಎರಡು ಬಾರಿ ಕಾಯಿಸಿ ಆರಿಸಿದ ಹಾಲಿಗೆ ಅರಿಸಿನ ಪುಡಿ ಬೆರೆಸಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದೆಂದು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಆಯುಷ್ ಇಲಾಖೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಸದಸ್ಯರಾದ ಎಸ್. ರಾಮಕೃಷ್ಣ, ತಿಮ್ಮಯ್ಯ, ಪಿ. ಮಂಜುಳ ಜಿ.ಹೆಚ್. ಜಗನ್ನಾಥ್, ಗಾಯಿತ್ರಿದೇವಿ ಹಾಗೂ ಸ್ಥಾಯಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ. ಉಪಕಾರ್ಯದರ್ಶಿ(ಅಭಿವೃದ್ಧಿ) ಟಿ.ಕೆ. ರಮೇಶ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅನುಷ್ಠಾನ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿಯವರು ಇದ್ದರು.