IMG 20210824 WA0005

ಜಲ್ ಜೀವನ್ ಮಿಷನ್ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಸೂಚನೆ….!

Genaral STATE

ಜಲ್ ಜೀವನ್ ಮಿಷನ್ ಪ್ರಗತಿ ಪರಿಶೀಲನೆ- ಬಹುಗ್ರಾಮ ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು, ಆಗಸ್ಟ್24- ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಚುರುಕುಗೊಳಿಸುವ ಉದ್ದೇಶದಿಂದ ಈ ಯೋಜನೆಯಡಿ ಕೈಗೆತ್ತಿಕೊಂಡಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿನಾಂಕ 24-8-2021ರಂದು ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಲಜೀವನ್ ಮಿಷನ್ ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ 15 ದಿನಕ್ಕೊಮ್ಮೆ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಕಾಲ ಕಾಲಕ್ಕೆ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದ ಮುಖ್ಯಮಂತ್ರಿಗಳು, ಪ್ರತಿ ತಿಂಗಳು ತಾವು ಖುದ್ದು ಪ್ರಗತಿ ಪರಿಶೀಲನೆ ಮಾಡುವುದಾಗಿ ತಿಳಿಸಿದರು.

ಮೇಲ್ಮೈ ಜಲ ಮೂಲ ಇಲ್ಲದ ಜಿಲ್ಲೆಗಳಿಗೆ ನೀರು ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.IMG 20210824 WA0006

2022-23ರ ಸಾಲಿಗೆ ಯೋಜನೆ ರೂಪಿಸಿ, ಅನುಮೋದನೆ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪ್ರಸಕ್ತ ಸಾಲಿನ ಎಲ್ಲ ಡಿಪಿಆರ್ ಗಳ ಅನುಮೋದನಾ ಪ್ರಕ್ರಿಯೆ ಅಕ್ಟೋಬರ್ ಒಳಗೆ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಅನುಮೋದನೆಯಲ್ಲಿನ ತೊಡಕುಗಳ ನಿವಾರಣೆಗೆ ತಾವೇ ಖುದ್ದು ಕ್ರಮ ವಹಿಸುವ ಭರವಸೆ ನೀಡಿದರು.

ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.