ರಾಜ್ಯಕ್ಕೆ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ನೀಡಲು ಕೇಂದ್ರ ಒಪ್ಪಿಗೆ: ಬಸವರಾಜ ಬೊಮ್ಮಾಯಿ ಹೇಳಿಕೆ
ನವದೆಹಲಿ, ಆಗಸ್ಟ್ 26 :ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ನವ ದೆಹಲಿಯಲ್ಲಿ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು.
ಈಗ ಪ್ರತಿ ದಿನ 3.5 ಲಕ್ಷದಿಂದ 4 ಲಕ್ಷ ಲಸಿಕೆ ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಸೆಪ್ಟೆಂಬರ್ ತಿಂಗಳಿಂದ ಪ್ರತಿ ದಿನ 5 ಲಕ್ಷ ಲಸಿಕೆ ಹಾಕಲು ರಾಜ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂಬ ಸಂಗತಿಯನ್ನು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರ ಗಮನಕ್ಕೆ ತರಲಾಯಿತು. ರಾಜ್ಯದ ಈ ಪ್ರಸ್ತಾವನೆಗೆ ಅವರು ಒಪ್ಪಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡುವ ಭರವಸೆ ನೀಡಿದರು ಎಂದು ಅವರು ಹೇಳಿದರು.
ಹೊಸ ಜವಳಿ ನೀತಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಕೇಂದ್ರ ಜವಳಿ ಖಾತೆ ಸಚಿವರಾದ ಪಿಯೂಶ ಗೋಯಲ್ ಅವರನ್ನು ಇಂದು ಭೇಟಿ ಮಾಡಿದ್ದೆ. ಈ ಸಂದರ್ಭದಲ್ಲಿ ಅವರು ವಿಷಯ ತಿಳಿಸಿದರು ಎಂದು ಸಿಎಂ ಹೆಳಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ್ದೆ. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದೆ. ದೇಶದಲ್ಲಿಯೇ ಮೊಟ್ಟ ಮೊದಲ ರಾಜ್ಯವಾಗಿ ಕರ್ನಾಟಕ ಅನುಷ್ಠಾನಕ್ಕೆ ತಂದಿದೆ ಎಂದು ಅವರು ಹೇಳಿದರು.