ರೈತ ವಿದ್ಯಾನಿಧಿ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
ಯೋಜನೆಯ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸರ್ಕಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮೈಸೂರು, ಅಕ್ಟೋಬರ್ 6-ತಾವು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನ ಕೈಗೊಂಡ ರೈತರ ಮಕ್ಕಳಿಗೆ ಶಿಷ್ಯವೇತನ ನೀಡುವ ರೈತ ವಿದ್ಯಾನಿಧಿ ಯೋಜನೆ ಕುರಿತು ಕೇಂದ್ರ ಸರ್ಕಾರ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದು, ಯೋಜನೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಹಳ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಹರ್ಷವ್ಯಕ್ತಪಡಿಸಿದರು.
ಅವರು ಇಂದು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್. ಎ. ರಾಮದಾಸ್ ಅವರು ತಮ್ಮ ಕ್ಷೇತ್ರದಲ್ಲಿ ಆಯೋಜಿಸಿದ್ದ 20 ದಿನಗಳ ಮೋದಿ ಯುಗ್ ಉತ್ಸವ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮನದಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಆದರೆ ಈ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಿದರೆ ಆಶ್ಚರ್ಯವೇನಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.
ಬರುವ ದಿನಗಳಲ್ಲಿ ಅಮೃತ ನಗರೋತ್ಥಾನ ಯೋಜನೆಯನ್ನು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ, ನಗರಸಭೆ , ಪುರಸಭೆ ಪಟ್ಟಣ ಪಂಚಾಯಿತಿಗಳಲ್ಲಿ ಜಾರಿ ಮಾಡುವುದಾಗಿ ಇದೇ ಸಂದರ್ಭದಲ್ಲಿ ಮಹತ್ವದ ಘೋಷಣೆ ಮಾಡಿದರು.
ಮೈಸೂರಿನ ಮಾರುಕಟ್ಟೆ ಹಾಗೂ ಲ್ಯಾಂಡ್ಸ್ಡೌನ್ ಕಟ್ಟಡ ಪುನಶ್ಚೇತನಕ್ಕೆ ಕ್ರಮ ವಹಿಸಲಾಗುವುದು. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಭೂಸ್ವಾಧೀನಕ್ಕಾಗಿ ಮುಂದಿನ ಆಯವ್ಯಯದಲ್ಲಿ ಅನುದಾನ ಒದಗಿಸಲಾಗುವುದು. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಫಿಲ್ಮ್ ಸಿಟಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು. ಇದರೊಂದಿಗೆ ಮೈಸೂರು ನಗರದಲ್ಲಿ ವಿದ್ಯುತ್ ಮಿತವ್ಯಯದ ದೃಷ್ಟಿಯಿಂದ 60 ಸಾವಿರ ಎಲ್ ಇ ಡಿ ಬೀದಿ ದೀಪಗಳನ್ನು ಅಳವಡಿಸಲಾಗುತ್ತಿದೆ. ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 150 ಕೋಟಿ ರೂ. ಒದಗಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮುಡಾ ಬಡಾವಣೆಗಳ ಸಮಗ್ರ ಅಭಿವೃದ್ಧಿಗೆ ಒಂದು ಬಾರಿಯ ಅನುದಾನವಾಗಿ 379 ಕೋಟಿ ರೂ. ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಅಂತೆಯೇ ಸಂಧ್ಯಾಸುರಕ್ಷಾ, ವಿಧವಾ ವೇತನ ಹಾಗೂ ಅಂಗವಿಕಲರ ಮಾಸಾಶನ ಮೊತ್ತವನ್ನು 200 ರೂ. ಗಳಷ್ಟು ಹೆಚ್ಚಿಸಲಾಗಿದೆ ಎಂದರು.
ಆರ್ಥಿಕ ಹಿಂಜರಿತವಿದ್ದರೂ, ಅಭಿವೃದ್ಧಿ ವೇಗ ಕುಂಠಿತವಾಗಬಾರದು ಎಂಬ ಆಶಯದೊಂದಿಗೆ ಅಭಿವೃದ್ಧಿ ಯೋಜನೆಗಳ ಆದ್ಯತೆಗಳನ್ನು ಮರು ನಿಗದಿ ಪಡಿಸಿ, ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಶಾಸಕರು, ಜನತೆ ಸಹಕಾರ ನೀಡಿದರೆ, ಈ ಸಂಕಷ್ಟದಿಂದ ಶೀಘ್ರವೇ ಪಾರಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳು ನುಡಿದರು.
ಶಾಸಕ ಎಸ್.ಎ. ರಾಮದಾಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅತ್ಯಾಪ್ತರಲ್ಲಿ ಒಬ್ಬರು. ಪ್ರಧಾನಿಯವರ ಸ್ಫೂರ್ತಿ ಸೆಲೆ ಈ ಕ್ಷೇತ್ರದಲ್ಲಿ ಕಾಣಸಿಗುತ್ತಿದೆ. ಕಳೆದ 20 ದಿನಗಳಲ್ಲಿ ಕೇಂದ್ರ ಸರ್ಕಾರದ 198 ಹಾಗೂ ರಾಜ್ಯ ಸರ್ಕಾರದ 48 ಕ್ಕೂ ಹೆಚ್ಚು ಯೋಜನೆಗಳನ್ನು 71 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ತಲುಪಿಸಿರುವುದು ಅವರೊಬ್ಬರ ಜನಪ್ರಿಯ ಮಾತ್ರವಲ್ಲ, ಜನೋಪಯೋಗಿ ಶಾಸಕ ಎಂಬುದಕ್ಕೆ ಸಾಕ್ಷಿ. ಇವರ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಪುಸ್ತಕವನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ಕಳುಹಿಸಿ, ತಮ್ಮ ಜಿಲ್ಲೆಗಳ ಎಲ್ಲ ಕ್ಷೇತ್ರಗಳಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸುವಂತೆ ಪತ್ರ ಬರೆದು ಸೂಚಿಸುವುದಾಗಿ ತಿಳಿಸಿದರು.
ಶಾಸಕ ರಾಮದಾಸ್ ಅವರು ಕೋವಿಡ್ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಜನತೆಗೆ ಆಯುಷ್ ರೋಗ ನಿರೋಧಕ ಕಿಟ್ ವಿತರಿಸಿ, ಲಸಿಕೆ ಬಂದ ನಂತರ ಹೆಚ್ಚಿನ ಜನರಿಗೆ ಲಸಿಕೆ ಹಾಕಿಸಿ, ಆಪತ್ಕಾಲದಲ್ಲಿ ಜನರ ರಕ್ಷಣೆ ಮಾಡುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ, ಆರೋಗ್ಯ, ಸ್ವಚ್ಛತೆ, ಕೈಗಾರಿಕೆಗಳ ಅಭಿವೃದ್ಧಿ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಜನರ ಶಕ್ತಿ ಬಳಸಿ ದೇಶ ಕಟ್ಟುವಲ್ಲಿ ನಿರತರಾಗಿದ್ದಾರೆ. ನವ ಭಾರತಕ್ಕೆ ನವ ಕರ್ನಾಟಕ ಶಕ್ತಿ ನೀಡುವ ರೀತಿಯಲ್ಲಿ ನಾವೆಲ್ಲರೂ ಪ್ರಧಾನಿಯವರೊಂದಿಗೆ ಕೈ ಜೋಡಿಸಿ, ಶ್ರಮಿಸೋಣ ಎಂದು ತಿಳಿಸಿದರು.
ರಾಜ್ಯದಲ್ಲಿ ಯೋಜನೆಗಳನ್ನು ನಿಗದಿತ ಸಮಯದಲ್ಲಿ ಅನುಷ್ಠಾನಗೊಳಿಸುವ ಮೂಲಕ ಪ್ರಧಾನಿಯವರ ಆಶಯ ಸಾಕಾರಗೊಳಿಸಲು ಯತ್ನಿಸುವುದಾಗಿ ತಿಳಿಸಿದರು.
ಗುರುವಾರ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವ ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಚಾಮರಾಜನಗರ ಕರ್ನಾಟಕದ ಪ್ರಮುಖ ಭಾಗ. ಈ ಜಾಗದಲ್ಲಿ ದೋಷವಿಲ್ಲ. ದೃಷ್ಟಿಯಲ್ಲಿ ದೋಷವಿದೆ. ಮುಂದೆಯೂ ಅಭಿವೃದ್ಧಿ ವಿಷಯದಲ್ಲಿ ಅಗತ್ಯವಿದ್ದಾಗಲೆಲ್ಲಾ ಚಾಮರಾಜನಗರಕ್ಕೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಸಮಾರಂಭದಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್, ಬಿ.ಎ. ಬಸವರಾಜ, ಮೈಸೂರು ಮೇಯರ್ ಸುನಂದಾ ಫಾಲನೇತ್ರ, ಶಾಸಕರಾದ ರಾಮದಾಸ್, ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.