‘ನಮ್ಮ ಶಾಲೆ, ನನ್ನ ಕೊಡುಗೆ’ ಶೀಘ್ರದಲ್ಲೇ ಆ್ಯಪ್ ಬಿಡುಗಡೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಸಂಸ್ಥೆಗಳು, ಸಾರ್ವಜನಿಕರು ಕೈ ಜೋಡಿಸಬೇಕು: ಬಿ.ಸಿ.ನಾಗೇಶ್,
ಬೆಂಗಳೂರು: ಫೆಬ್ರವರಿ 9 :- ಸರ್ಕಾರದ ಜೊತೆ ಖಾಸಗಿ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕೈ ಜೋಡಿಸಿದರೆ ಅತ್ಯುತ್ತಮ ಸರ್ಕಾರಿ ಶಾಲೆಗಳನ್ನು ರೂಪಿಸಲು ಸಾಧ್ಯವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಬೆಂಗಳೂರಿನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಶಾಲಾ ಶಿಕ್ಷಣದ ಸಮಗ್ರ ಅಭಿವೃದ್ಧಿ ಕುರಿತು ಖಾಸಗಿ ವಲಯಗಳ ಸಂಸ್ಥೆಗಳೊಂದಿಗೆ ಸಂವಾದ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವ ನಾಗೇಶ್ ಅವರು ಮಾತನಾಡಿದರು.
‘ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಶಿಕ್ಷಣ ಇಲಾಖೆಯ ವಿವಿಧ ವಿಭಾಗಗಳಲ್ಲಿ ಹಲವು ಸರ್ಕಾರೇತರ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಆ ಎಲ್ಲ ಸಂಸ್ಥೆಗಳನ್ನು ಒಂದೇ ವೇದಿಕೆಯಡಿ ತಂದು, ಉತ್ತಮ ಸಂಯೋಜನೆ, ಸಮನ್ವಯದೊಂದಿಗೆ ಮತ್ತಷ್ಟು ಉತ್ತಮ ರೀತಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸುವ ಉದ್ದೇಶ ಇದೆ. ಕಳೆದ ವರ್ಷ ಸೆಪ್ಟಂಬರ್ 5ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ‘ನಮ್ಮ ಶಾಲೆ, ನನ್ನ ಕೊಡುಗೆ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದರು. ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ‘ನಮ್ಮ ಶಾಲೆ, ನನ್ನ ಕೊಡುಗೆ’ ಸೊಸೈಟಿಯನ್ನು ಸ್ಥಾಪಿಸಲಾಗುತ್ತಿದೆ. ಪೋರ್ಟಲ್‌ನ್ನು ಮತ್ತಷ್ಟು ಅಪ್‌ಡೇಟ್ ಮಾಡುವ ಜೊತೆಗೆ ಮೊಬೈಲ್ ಫೋನ್ ಆ್ಯಪ್‌ನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೆಲ ವಾರಗಳಲ್ಲಿ ಮೊಬೈಲ್‌ಫೋನ್ ಆ್ಯಪ್‌ನ್ನು ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಗೊಳಿಸಲು ಯೋಜಿಸಲಾಗಿದೆ’ ಎಂದು ಸಚಿವರು ತಿಳಿಸಿದರು.
‘ನನ್ನ ಶಾಲೆ, ನನ್ನ ಕೊಡುಗೆ’ ವೆಬ್‌ಪೋರ್ಟಲ್/ ಆ್ಯಪ್‌ನಲ್ಲಿ ರಾಜ್ಯದ ಪ್ರತಿಯೊಂದು ಶಾಲೆಯ ಸಂಪೂರ್ಣ ಮಾಹಿತಿ ಹಾಗೂ ಆ ಶಾಲೆಗೆ ಅಗತ್ಯವಿರುವ ಪೀಠೋಪಕರಣ, ಕೊಠಡಿ, ಕಂಪ್ಯೂಟರ್, ಪುಸ್ತಕ, ಶೈಕ್ಷಣಿಕ ಉಪಕರಣಗಳು ಸೇರಿದಂತೆ ಎಲ್ಲ ರೀತಿಯ ಅಗತ್ಯತೆಗಳ ಮಾಹಿತಿಯನ್ನು ನೀಡಲಾಗಿರುತ್ತದೆ. ಲಾಗಿನ್ ಆಗುವ ಮೂಲಕ ನಿರ್ದಿಷ್ಟ ಶಾಲೆಯ ಬೆಳವಣಿಗೆಗೆ ಆರ್ಥಿಕ ನೆರವು ನೀಡುವುದರ ಜೊತೆಗೆ ಅಗತ್ಯ ವಸ್ತುಗಳನ್ನು ನೇರವಾಗಿ ನೀಡಲು ಸಾಧ್ಯವಿದೆ’ ಎಂದು ಸಚಿವರು ತಿಳಿಸಿದರು.
‘ಶಾಲೆಯಲ್ಲಿ ಕಲಿತ ಹಳೇ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಕಾರ್ಪೋರೇಟ್ ಸಂಸ್ಥೆಗಳು, ಸಾರ್ವಜನಿಕರು ತಮ್ಮ ಸಾಮರ್ಥ್ಯ ಅನುಸಾರ ಸರ್ಕಾರಿ ಶಾಲೆಗಳ ಸಬಲೀಕರಣದಲ್ಲಿ ತೊಡಗಿಸಿಕೊಳ್ಳಲು ಸಮಗ್ರ ಯೋಜನೆಯನ್ನು ರೂಪಿಸಲಾಗುತ್ತಿದೆ’ ಎಂದು ಸಚಿವ ನಾಗೇಶ್ ತಿಳಿಸಿದರು.
‘ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಶಿಕ್ಷಣ ಗುಣಮಟ್ಟ ಸುಧಾರಣೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಕೆಲವು ಯೋಜನೆಗಳನ್ನು ಸಚಿವರ ಮುಂದೆ ಪ್ರಸ್ತುಪಡಿಸಿದರು. ಮುಂದಿನ ದಿನಗಳಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಸಚಿವರು ತಿಳಿಸಿದರು.
ಶಿಕ್ಷಣ ಇಲಾಖೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ 75ಕ್ಕೂ ಹೆಚ್ಚು ಸರ್ಕಾರೇತರ ಸಂಸ್ಥೆಗಳು, ಕಾರ್ಪೋರೇಟ್ ಸಂಸ್ಥೆಗಳು, ಖಾಸಗಿ ಬಹುರಾಷ್ಟ್ರೀಯ ಕಂಪನಿಗಳು ಪ್ರತಿನಿಧಿಗಳು ಸಂವಾದದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾದ ಆರ್.ವಿಶಾಲ್, ಸಮಗ್ರ ಶಿಕ್ಷಣ ಕರ್ನಾಟಕ ಯೋಜನಾ ನಿರ್ದೇಶಕರಾದ ಎಂ. ದೀಪಾ ಸೇರಿದಂತೆ ಶಿಕ್ಷಣ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.