ಮೂಲಸೌಕರ್ಯಕ್ಕೆ 500 ಕೋಟಿ ರೂಪಾಯಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಪುನಃ ಸ್ಥಾಪನೆ ಸೇರಿದಂತೆ ತುರ್ತು ಕೆಲಸಕ್ಕೆ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಘೋಷಿಸಿದರು.
ಉಡುಪಿಯಲ್ಲಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿಯ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು.
ಮಳೆಯಿಂದಾಗಿ ಬಹಳಷ್ಟು ರಸ್ತೆಗಳು ಹದಗೆಟ್ಟಿವೆ, ಮೂಲಸೌಕರ್ಯಗಳು ಹಾಳಾಗಿವೆ. ಹೀಗಾಗಿ ತಕ್ಷಣ ಮೂಲಸೌಕರ್ಯಗಳನ್ನು ಮರು ಸ್ಥಾಪನೆ ಮಾಡುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಉಂಟಾಗಿರುವ ಮೂಲಸೌಕರ್ಯ ಹಾನಿಗೆ ಈ 500 ಕೋಟಿ ಹಣವನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.