ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯಾತ್ರೆಯ ಉದ್ಘಾಟನಾ ಸಮಾರಂಭ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಬುಧವಾರ ಸಂಜೆ ನೆರವೇರಿತು. ಯಾತ್ರೆಯ ರಾಷ್ಟ್ರೀಯ ಸಮಿತಿ ಅಧ್ಯಕ್ಷ ದಿಗ್ವಿಜಯ್ ಸಿಂಗ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯಸಭೆ ಅಧ್ಯಕ್ಷ ಜೈರಾಮ್ ರಮೇಶ್, ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್, ಕೇಂದ್ರದ ಮಾಜಿ ಸಚಿವ ಚಿದಂಬರಂ, ಸಂಸದ ಡಿ ಕೆ ಸುರೇಶ್ ಮತ್ತಿತರರು ಭಾಗವಹಿಸಿದ್ದರು.
ಉದ್ಘಾಟನಾ ಸಮಾರಂಭಕ್ಕೆ ಮೊದಲು ಸಮೀಪದ ಮಹಾತ್ಮ ಗಾಂಧಿ ಸ್ಮಾರಕದಲ್ಲಿ ಈ ನಾಯಕರು ಸಭೆ ನಡೆಸಿ ಪ್ರಾರ್ಥನೆ ಸಲ್ಲಿಸಿದರು.
ನಂತರ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಅವರು ರಾಹುಲ್ ಗಾಂಧಿ ಅವರಿಗೆ ರಾಷ್ಟ್ರಧ್ವಜ ನೀಡಿ, ಭಾರತ್ ಜೋಡೋ ಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದರು.
ತರುವಾಯ ರಾಹುಲ್ ಗಾಂಧಿ ಮತ್ತಿತರ ನಾಯಕರು ಯಾತ್ರೆಯ ಉದ್ಘಾಟನಾ ಸಮಾರಂಭ ಸ್ಥಳಕ್ಕೆ ಕಾಲ್ನಡಿಗೆಯಲ್ಲಿ ಆಗಮಿಸಿದರು.