ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾಳಾದ ರಸ್ತೆಗಳ ಅಭಿವೃದ್ಧಿಗೆ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ):
ಕರ್ನಾಟಕದಲ್ಲಿ ಹೆಚ್ಚಿನ ಮಳೆ ಬಿದ್ದಿದ್ದು, ಇದರಿಂದ ಹಾಳಾದ ರಸ್ತೆಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸಭೆ ಅಧಿವೇಶನದಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ.ಮಹದೇವ ಅವರ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಎನ್‍ಡಿಆರ್‍ಎಫ್ ಹಣದ ಜೊತೆಗೆ ಆರ್‍ಡಿಪಿಆರ್ ನಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು. ಮಳೆ ನಿಂತ ಮೇಲೆ ಮಳೆಯಿಂದ ಹಾನಿಗೊಳಗಾದದ ರಸ್ತೆ ಹಾಗೂ ಸೇತುವೆಗಳನ್ನು ಅನುದಾನದ ಲಭ್ಯತೆಗೆ ಅನುಸಾರವಾಗಿ ದುರಸ್ತಿ ಕಾರ್ಯ ಪೂರ್ಣಗೊಳಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಸದಸ್ಯರಾದ ಕೆ.ಮಹದೇವ ಅವರು ಮಾತನಾಡಿ, ಪಿರಿಯಾಪಟ್ಟಣದಲ್ಲಿ ಅತಿ ಹೆಚ್ಚಿನ ಮಳೆಯಿಂದಾಗಿ 1,005 ಮನೆಗಳು ಕುಸಿದಿದ್ದು, ಮುಖ್ಯಮಂತ್ರಿಗಳು ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಪರಿಹಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದರು. ಅದರಂತೆ ಕುಸಿದಿದ್ದ 1,005 ಮನೆಗಳಿಗೂ ಪರಿಹಾರ ಮಂಜೂರು ಮಾಡಿದ್ದು, ಕ್ಷೇತ್ರದ ಜನತೆಯ ಪರವಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದರು.