IMG 20231207 WA0043

Karnataka : ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ:ಮುಖ್ಯಮಂತ್ರಿಗಳೊಂದಿಗೆ ಚರ್ಚೆ….!

Genaral STATE

ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ

ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ:ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು / ಬೆಳಗಾವಿ ಸುವರ್ಣಸೌಧ, ಡಿ.07(ಕರ್ನಾಟಕ ವಾರ್ತೆ):

ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ ಈಶ್ವರ್ ಅವರು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.

ರಾಜ್ಯದಲ್ಲಿ ಈ ಹಿಂದೆ 2019-20ನೇ ಸಾಲಿನಲ್ಲಿ ಉಚಿತ ಬೈಸಿಕಲ್ ವಿತರಣೆ ಮಾಡಲಾಗಿರುತ್ತದೆ. ಪ್ರಸ್ತುತ ಸಾಲಿನಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸಲಾಗುತ್ತಿಲ್ಲ. ಆದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ನಿರಂತರವಾಗಿ ಹಾಜರಾಗಲು ಅನುಕೂಲವಾಗುವಂತೆ ಸರಕಾರಿ ಬಸ್‍ಗಳಲ್ಲಿ ಪ್ರಯಾಣಿಸಲು ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತಿದೆ.

ಸಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ತಮ್ಮ ವ್ಯಾಪ್ತಿಯನ್ನು ಮೀರಿದ ಶಾಲೆಗಳಿಗೆ ಕ್ರಮಿಸಲು ಪ್ರತಿ ವಿದ್ಯಾರ್ಥಿಗೆ ಮಾಹೆಯಾನ 600 ರೂ.ಗಳಂತೆ ಆರು ತಿಂಗಳಿಂದ ಸಾರಿಗೆ ಭತ್ಯೆ ನೀಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರಕಾರಿ ಶಾಲಾ ಮಕ್ಕಳಿಗೆ ವಿದ್ಯಾವಿಕಾಸ ಯೋಜನೆಯಡಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಉಚಿತವಾಗಿ ನೀಡಲಾಗುತ್ತಿದೆ ಎಂದರು.

2020-21ರಿಂದ 2022-23ನೇ ಸಾಲಿನವರೆಗೆ 7098 ಶಾಲೆಗಳಿಗೆ 9604 ಕೊಠಡಿಗಳ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳಿಗೆ ಒಟ್ಟು 129768.90ಲಕ್ಷಗಳು ನಿಗದಿಯಾಗಿದ್ದು, ರೂ.9450.139 ಲಕ್ಷಗಳನ್ನು ಬಿಡುಗಡೆ ಮಾಡಿ ಕ್ರಮವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸದಸ್ಯ ಯು.ಬಿ.ಬಣಕಾರ್ ಅವರ ಪ್ರಶ್ನೆಗೆ ಉತ್ತರಿಸಿದರು.

ಈ ಕೊಠಡಿಗಳ ನಿರ್ಮಾಣಕ್ಕೆ ಕೊರತೆ ಅನುದಾನವನ್ನು 2023-24ನೇ ಸಾಲಿನಲ್ಲಿ ಒದಗಿಸಲು ಕ್ರಮವಹಿಸಲಾಗಿದೆ. ಆಯವ್ಯಯದಲ್ಲಿ ಒದಗಿಸಲಾದ ಅನುದಾನ ಲಭ್ಯತೆ ಆಧರಿಸಿ ಅಗತ್ಯತೆಗೆ ಅನುಗುಣವಾಗಿ ಹಂತ-ಹಂತವಾಗಿ ರಾಜ್ಯಾದ್ಯಂತ ಶಾಲೆಗಳಲ್ಲಿ ಕೊಠಡಿ ನಿರ್ಮಾಣ ಮಾಡಲು ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದರು.

ಮಲೆನಾಡು ಭಾಗದ ಎಲ್ಲ ಸರಕಾರಿ ನೌಕರರಿಗೆ 6ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಗಿರಿತಾಣ ಭತ್ಯೆ ರದ್ದುಪಡಿಸಿ ಆದೇಶಿಸಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸದ್ಯಕ್ಕೆ ಗಿರಿಭತ್ಯೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸದಸ್ಯ ನಯನಾ ಮೋಟಮ್ಮ ಅವರ ಪ್ರಶ್ನೆಗೆ ಸಚಿವ ಮಧುಬಂಗಾರಪ್ಪ ಅವರು ಉತ್ತರಿಸಿದರು.