ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕೋಟ್ಪಾ ಕಾಯ್ದೆ ಅನುಷ್ಟಾನಕ್ಕೆಸೂಚನೆ –ಎಡಿಸಿ
ತುಮಕೂರು (ಕ.ವಾ.) ಅ.24: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಮ್ಮ ಕೊಠಡಿಯಲ್ಲಿ ಗುರುವಾರ ಜರುಗಿದ ತಂಬಾಕು ನಿಯಂತ್ರಣ ಕೋಶನ 2ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸಂಬಂಧಿಸಿದ ಇಲಾಖೆಗಳು ಕೋಟ್ಪಾ ಕಾಯ್ದೆಯ ಅನುಷ್ಠಾನವನ್ನು ಕಟ್ಟುನಿಟ್ಟಿನ ಪಾಲನೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತಂಬಾಕು ದುಷ್ಪರಿಣಾಮಗಳ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಅಬಕಾರಿ ಇಲಾಖಾ ಅಧಿಕಾರಿಗಳು ಕೋಟ್ಪಾ ಕಾಯ್ದೆಯ ನಿಯಮಗಳನ್ನು ಸಾರ್ವಜನಿಕ ಸ್ಥಳದಲ್ಲಿ ಪ್ರದರ್ಶಿಸಬೇಕು ಎಂದು ಸೂಚನೆ ನೀಡಿದರಲ್ಲದೇ ತಾಲ್ಲೂಕು ಹಂತದಲ್ಲಿ ಹೆಚ್ಚಿನ ಕೋಟ್ಪಾ ದಾಳಿ ನಡೆಸುವ ಜೊತೆಗೆ ಸಾರ್ವಜನಿಕ ಅರಿವಿನ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ನಿರ್ದೇಶನ
ನೀಡಿದರು.
ಕೋಟ್ಪಾ ಕಾಯ್ದೆಯ ಸೆಕ್ಷನ್ 6(ಬಿ) ಪ್ರಕಾರ ಶೈಕ್ಷಣಿಕ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನ ಸೇವನೆ ಹಾಗೂ ಮಾರಾಟ ಕುರಿತು ಆಯಾ ಶಾಲಾ/ ಕಾಲೇಜಿನ ಮುಖ್ಯಸ್ಥರು ಸ್ಥಳೀಯ ಪೊಲೀಸ್ ಠಾಣೆಯ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ
ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳನ್ನಾಗಿ ಮಾಡಲು ಕ್ರಮವಹಿಸಲು ಸೂಚನೆ ನೀಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿಗಳು ಹಾಗೂ ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್, ಜಿಲ್ಲಾ ಸರ್ವೇಲೆನ್ಸ್
ಅಧಿಕಾರಿಗಳು ಹಾಗೂ ಕಾರ್ಯಾಕ್ರಮಾಧಿಕಾರಿ ಡಾ|| ರಾಮೇಗೌಡ ಪಿ.ಬಿ.ಎಸ್
ಸೇರಿದಂತೆ ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಪ್ರವಾಸೋದ್ಯಮ, ಪ್ರಾದೇಶಿಕ ಸಾರಿಗೆ, ಅಬಕಾರಿ ಇಲಾಖೆ, ಕೆ.ಎಸ್.ಆರ್.ಟಿ.ಸಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.