ಜನವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ
ಅಧಿವೇಶನದಲ್ಲಿ ಕಾಯ್ದೆಗಳ ತಿದ್ದುಪಡಿ ವಿರುದ್ಧ ಧ್ವನಿ ಎತ್ತುತ್ತೇವೆ: ಬಂಡೆಪ್ಪ ಖಾಶೆಂಪುರ್
ಬೀದರ್ (ಆ.28): ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವ ಕರ್ನಾಟಕ ಭೂ – ಸುಧಾರಣೆ ಕಾಯ್ದೆ – 1961, ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ – 1966, ಕೈಗಾರಿಕಾ ವ್ಯಜ್ಯ ಕಾಯ್ದೆ – 1947, ಕಾರ್ಖಾನೆ ಕಾಯ್ದೆ – 1947 ಗಳ ವಿರುದ್ಧ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇವೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ನಗರದ ಜೆಡಿಎಸ್ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೂ ನಡೆದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ & ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ರೈತರ ಪರವಾಗಿ ಕೆಲಸ ಮಾಡುತ್ತಿಲ್ಲ. ರೈತ ವಿರೋಧಿ ನಿಲುವುಗಳನ್ನು ಹೊಂದಿವೆ. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ರೈತ ವಿರೋಧಿ ನಿಲುವುಗಳನ್ನು ಕೈಗೊಂಡಿದೆ.
ಸರ್ಕಾರ ಕೂಡಲೇ ರೈತ ವಿರೋಧಿ ಸುಗ್ರೀವಾಜ್ಞೆಯನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೋರಾಟದ ಎಚ್ಚರಿಕೆ ನೀಡಿದರು.
ಈ ವೇಳೆ ರಾಜ್ಯ ಮಟ್ಟದ ಜೆಡಿಎಸ್ ನಾಯಕರು, ಜಿಲ್ಲಾ ಮಟ್ಟದ ಜೆಡಿಎಸ್ ನಾಯಕರು, ಸ್ಥಳೀಯ ಜೆಡಿಎಸ್ ಮುಖಂಡರು, ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.