- ಸಚಿವ ಸಂತೋಷ್ ಲಾಡ್ ಗೆ ಜವಬ್ದಾರಿ
- ಸಿದ್ದರಾಮಯ್ಯ : ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ
- ಭಯೋತ್ಪಾದನೆ ಎಂದಿಗೂ ಭಾರತವನ್ನು ಅಧೀರಗೊಳಿಸುವುದಿ
ಪಹಲ್ಗಾಮ್(ಜಮ್ಮು ಮತ್ತು ಕಾಶ್ಮೀರ):ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 27 ಮಂದಿ ಬಲಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕುಕೃತ್ಯ ಎಸಗಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸುವ ಮೂಲಕ ಕ್ರೌರ್ಯ ದಿಂದ ಮೆರೆದಿದ್ದಾರೆ.ಉಗ್ರರಿಂದ ದಾಳಿಯಾಗುತ್ತಿದ್ದಂತೆ ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರೆದಿದ್ದು ಕಾರ್ಯಾಚರಣೆ ನಡೆಸಿದ್ದಾರೆ.
ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಸಚಿವ ಸಂತೋಷ್ ಲಾಡ್ ಗೆ ಜವಬ್ದಾರಿ
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದರು.
ಸಿಎಂ ಅವರ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪೊಲೀಸ್ ಅಧಿಕಾರಿಗಳೂ ತೆರಳಿದ್ದಾರೆ.ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂರೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಮುಖ್ಯಮಂತ್ರಿಗಳ ಸೂಚನೆಯಂತೆ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರಕ್ಕೆ ತೆರಳುತ್ತಿದ್ದಾರೆ.

ಸಿದ್ದರಾಮಯ್ಯ : ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ.
ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ.
ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ.
ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ.
ಹೆಚ್.ಡಿ. ಕುಮಾರಸ್ವಾಮಿ : ಭಯೋತ್ಪಾದನೆ ಎಂದಿಗೂ ಭಾರತವನ್ನು ಅಧೀರಗೊಳಿಸುವುದಿಲ್ಲ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕ ದಾಳಿ ಖಂಡನೀಯ ಮತ್ತು ಹೇಯ. ಈ ಹೀನಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
ಗೌರವಾನ್ವಿತ ಪ್ರಧಾನಿಗಳಾದ @narendramodi ಅವರ ಬಲಿಷ್ಠ ನಾಯಕತ್ವದಲ್ಲಿ ಕಣಿವೆ ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆ ಆಗಿದ್ದು, ಹೇಗಾದರೂ ಅದನ್ನು ಹಾಳು ಮಾಡುವ ದುರುದ್ದೇಶದಿಂದ ಉಗ್ರರು ಈ ಕುಕೃತ್ಯ ಎಸಗಿದ್ದಾರೆ.
ಭಯೋತ್ಪಾದನೆ ಎಂದಿಗೂ ಭಾರತವನ್ನು ಅಧೀರಗೊಳಿಸುವುದಿಲ್ಲ. ಇಂತಹ ವಿನಾಶಕಾರಿ ಶಕ್ತಿಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಭಾರತ ಹೊಂದಿದೆ.
ಅಮಾನವೀಯ ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಗಳಿಗೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.