ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
ಬೆಂಗಳೂರು : ಕಾಂಗ್ರೆಸ್ ನ ಹಿರಿಯ ಶಾಸಕ , ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಆದ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ (Shamanuru Shivashankarappa) ನಿಧನರಾಗಿದ್ದಾರೆ.ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
. 1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದರು ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯ ಸಂಸದರಾಗಿದ್ದಾರೆ
ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ:
ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಾಪ ಸೂಚನಾ ಸಂದೇಶದಲ್ಲಿ ತಿಳಿಸಿದ್ದಾರೆ.
ರಾಜ್ಯ ರಾಜಕಾರಣದ ಹಿರಿಯ ಧುರೀಣ, ಮಾಜಿ ಸಚಿವರು, ಹಿರಿಯ ಉದ್ಯಮಿ, ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡಿದ್ದ ಶಿವಶಂಕರಪ್ಪ ಅವರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದವರು ಎಂದು ಅವರು ಹೇಳಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಅಜಾತಶತ್ರು ಎಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು ಹಲವು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದರು. ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಸಚಿವರಾಗಿ ಕೂಡ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ
*ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ*
ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪ ರವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಯಿತು. ಈ ಬಗ್ಗೆ ವಿಷಾಧಿಸುತ್ತೇನೆ ಎಂದು ಸಂತಾಪ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಶಾಮನೂರು ಶಿವ ಶಂಕರಪ್ಪ ಅವರು ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜೊತೆಗೆ ರಾಜ್ಯದ ಶಾಸಕರಾಗಿ ಹಾಗೂ ಸಚಿವರಾಗಿ ದಕ್ಷ ಹಾಗೂ ಪ್ರಾಮಣಿಕತೆಯಿಂದ ಕಾರ್ಯನಿರ್ವಹಿಸಿದ್ದರು.
ವಿಶೇಷವಾಗಿ ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಮಾಜವನ್ನು ಮುನ್ನಡೆಸಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಮತ್ತು ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ, ವೀರಶೈವ ಸಮಾಜಕ್ಕೆ ಮತ್ತು ನನಗೆ ವಯಕ್ತಿಕವಾಗಿ ತುಂಬಲಾರದ ಹಾನಿಯಾಗಿದೆ. ಅವರ ಅಗಲಿಕೆಯ ದುಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರ ಶಾಂತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.
*ಶ್ಯಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಂಬನಿ*
ನವದೆಹಲಿ:* ನಾಡಿನ ಹಿರಿಯ ರಾಜಕಾರಣಿ, ಮಾಜಿ ಮಂತ್ರಿಗಳು, ಉದ್ಯಮಿಯೂ ಆಗಿದ್ದ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.
ಈ ಬಗ್ಗೆ ಶೋಕ ಸಂದೇಶ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು ಎಂದು ತಿಳಿಸಿದ್ದಾರೆ.
ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ ಎಂದು ಕೇಂದ್ರ ಸಚಿವರು ದುಃಖ ವ್ಯಕ್ತಪಡಿಸಿದ್ದಾರೆ.
ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.
*ಶ್ಯಾಮನೂರ ಪುತ್ರರಾದ ಸಚಿವ ಮಲ್ಲಿಕಾರ್ಜುನ್ ಅವರಿಗೆ ಸಚಿವರ ಕರೆ:*
ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ವಾರ್ತೆ ಗೊತ್ತಾದ ಕೂಡಲೇ ಶ್ಯಾಮನೂರರ ಪುತ್ರ ಹಾಗೂ ರಾಜ್ಯದ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಹಿರಿಯರಾದ ಶ್ಯಾಮನೂರರ ನಿಧನಕ್ಕೆ ಅತೀವ ನೋವು ವ್ಯಕ್ತಪಡಿಸಿ, ಸಾಂತ್ವನ ಹೇಳಿದರು.
