ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ
ಬೆಂಗಳೂರು, ಆಗಸ್ಟ್ 07, (ಕರ್ನಾಟಕ ವಾರ್ತೆ) : ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ಇಂದು ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ.
ಅವರು ವಿಧಾನ ಪರಿಷತ್ತಿನ ಉಪ ಸಭಾಪತಿಯವರಿಗೆ ಅಧಿಕೃತ ರಾಜೀನಾಮೆ ಪತ್ರವನ್ನು ರವಾನಿಸಿ ಸ್ವಇಚ್ಛೆಯಿಂದ ಸಭಾಪತಿ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. ಬಸವರಾಜ ಹೊರಟ್ಟಿ ಅವರು ರಾಜ್ಯ ರಾಜಕಾರಣದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು, ವಿಧಾನ ಪರಿಷತ್ತಿನಲ್ಲಿ ನಿರಂತರವಾಗಿ ಸುದೀರ್ಘ ಸೇವೆ ಸಲ್ಲಿಸಿದ ಅಪರೂಪದ ದಾಖಲೆ ಹೊಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಕ್ರೀಡಾ ಶಿಕ್ಷಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಹೊರಟ್ಟಿ ಅವರು ಶಿಕ್ಷಕರ ಹಕ್ಕುಗಳು ಮತ್ತು ಕುಂದು-ಕೊರತೆಗಳಿಗಾಗಿ ಸಕ್ರಿಯವಾಗಿ ಹೋರಾಡುವ ಮೂಲಕ ಶಿಕ್ಷಕ ಸಮುದಾಯದ ಪ್ರಮುಖ ನಾಯಕರಾಗಿ ಹೊರಹೊಮ್ಮಿದರು.
1980ರಲ್ಲಿ ಪ್ರಥಮ ಬಾರಿಗೆ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಶಾಸಕರಾಗಿ ಆಯ್ಕೆಯಾಗಿ, ನಂತರ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ನಿರಂತರವಾಗಿ 8 ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ದೇಶದಲ್ಲೇ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿ ಸತತವಾಗಿ ಇμÉ್ಟೂಂದು ದೀರ್ಘಾವಧಿಗೆ (40 ವರ್ಷಗಳು ಹೆಚ್ಚು ಅವಧಿ ಸೇವೆ) ಆಯ್ಕೆಯಾದ ಅಪರೂಪದ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ದೀರ್ಘಕಾಲ ಜಾತ್ಯತೀತ ಜನತಾದಳ ಪಕ್ಷದಲ್ಲಿದ್ದು, ಪಕ್ಷದ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು. ಮೇ 2022ರಲ್ಲಿ ಜೆಡಿಎಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರಿದರು. 2004–2006 ರ ಧರಂ ಸಿಂಗ್ ನೇತೃತ್ವದ ಸರ್ಕಾರದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಹಾಗೂ 2006–2007 ರ ಎಚ್.ಡಿ. ಕುಮಾರಸ್ವಾಮಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾಗಿ ಹಲವು ಬಾರಿ ಕರ್ತವ್ಯ ನಿರ್ವಹಿಸಿದ್ದಾರೆ. ಸರಳತೆ, ಶಿಕ್ಷಕ ಸಮುದಾಯದ ಪರವಾದ ನಿರಂತರ ಹೋರಾಟ ಹಾಗೂ ಮೇಲ್ಮನೆಯ ನಡಾವಳಿಗಳ ಮೇಲಿನ ಅಪಾರ ಅನುಭವಕ್ಕಾಗಿ ಬಸವರಾಜ ಹೊರಟ್ಟಿ ಅವರು ಪಕ್ಷಾತೀತವಾಗಿ ಗೌರವಿಸಲ್ಪಟ್ಟಿದ್ದಾರೆ.
ಆಗಸ್ಟ್ 14 ರಂದು ನೂತನ ಉಪಸಭಾಪತಿ, ಸಭಾಪತಿ ಆಯ್ಕೆ
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು ದೇಶದ ವಿಧಾನ ಪರಿಷತ್ ಇತಿಹಾಸದಲ್ಲೇ ಅತ್ಯಂತ ಹಿರಿಯ ನಾಯಕರು. ಅವರು ತಮ್ಮ ಹೃದಯ ವೈಶಾಲ್ಯತೆ ತೋರಿದ್ದಾರೆ. ಅದು ಮೆಚ್ಚುವಂತದ್ದು. ಆಗಸ್ಟ್ 13 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, 14 ರಂದು ನೂತನ ಉಪಸಭಾಪತಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಂತರ ಉಪಸಭಾಪತಿಗಳ ಮೂಲಕ ಸಭಾಪತಿಗಳ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಬಸವರಾಜ ಹೊರಟ್ಟಿ ಅವರೊಂದಿಗೆ ವಿಧಾನಸೌಧದಲ್ಲಿ ಚರ್ಚೆ ನಡೆಸಿದ್ದ ಮುಖ್ಯಮಂತ್ರಿಗಳು, ವಿಧಾನ ಪರಿಷತ್ತಿನ ಅಧ್ಯಕ್ಷ, ಉಪಾಧ್ಯಕ್ಷರನ್ನ ಆಯ್ಕೆ ಮಾಡಿ ನಂತರ ನಮ್ಮ ಸದಸ್ಯರೆಲ್ಲರಿಗೂ ಕೃತಜ್ಞತೆ ಸಲ್ಲಿಸುವ ಆಸೆಯನ್ನು ಬಸವರಾಜ ಹೊರಟ್ಟಿಯವರು ಇಟ್ಟುಕೊಂಡಿದ್ದಾರೆ. ಅವರ ಭಾವನೆಗಳನ್ನು ನಾವು ಒಪ್ಪಿಕೊಂಡಿದ್ದೇವೆ, ಗೌರವಿಸುತ್ತೇವೆ ಎಂದರು.
ಬಸವರಾಜ ಹೊರಟ್ಟಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ ಇತ್ತಲ್ಲ ಎಂದು ಕೇಳಿದಾಗ, ನಾವುಗಳೇ ಒಂದು ಒಪ್ಪಂದಕ್ಕೆ ಬಂದ ಮೇಲೆ ಮುಂದೇನಿದೆ? ಅವಿಶ್ವಾಸ ನಿರ್ಣಯ ಮಂಡನೆ ಅಪ್ರಸ್ತುತ. ಈಗ ಅವರೇ ರಾಜೀನಾಮೆ ನೀಡಿದ್ದಾರೆ. ಈಗ ರಾಜೀನಾಮೆ ಅಂಗೀಕರಿಸಿದರೂ ಅವರನ್ನೇ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಿದೆ ಎಂದರು.
ರಾಜೀನಾಮೆ ನೀಡುತ್ತೇನೆ ಎಂದು ಬಸವರಾಜ ಹೊರಟ್ಟಿ ಅವರು ದೇಶದ ಮುಂದೆಯೇ ಹೇಳಿರುವಾಗ ಆ ವಿಚಾರವೇ ಬಾರದು. ಬಸವರಾಜ ಹೊರಟ್ಟಿ ಅವರು ಶಿಸ್ತಿನ ಮನುಷ್ಯ. ಅವರು ಸಭಾಪತಿ ಸ್ಥಾನಕ್ಕೆ ನೀಡಿದಷ್ಟು ಗೌರವವನ್ನು ಯಾರೂ ನೀಡಿಲ್ಲ. ಎಲ್ಲಾ ಸಂದರ್ಭದಲ್ಲೂ ಸರ್ಕಾರದ ಗೌರವ ಕಾಪಾಡಿಕೊಂಡು ಬಂದಿದ್ದಾರೆ. ನಮಗೆಲ್ಲರಿಗೂ ಅವರ ಬಗ್ಗೆ ಹೆಮ್ಮೆಯಿದೆ ಎಂದರು.
