ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ: ಪರಮೇಶ್ವರ
ಪಿಆರ್‌ಸಿ ನೀಡುವಲ್ಲಿ ವಿಳಂಬ ಬೇಡ; ಪ್ರಜಾಸೇವಾ ಅಭಿಯಾನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ
ಬೆಂಗಳೂರು, ಸೆ.16: ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು, ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ರಾಜ್ಯದಲ್ಲಿ 43.81 ಲಕ್ಷ ಮತದಾರರ ಮ್ಯಾಪಿಂಗ್ ಆಗದಿರುವ ಹಿನ್ನೆಲೆಯಲ್ಲಿ, ಸ್ಥಳಾಂತರಗೊಂಡು ಬೇರೆಡೆ ನೆಲೆಸಿರುವ ಅರ್ಹ ಮತದಾರರ ಮಾಹಿತಿಯನ್ನು ಎಸ್‌ಐಆರ್ ಪ್ರಕ್ರಿಯೆಯಲ್ಲಿ ದಾಖಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ನೀಡುವ ಪ್ರಕ್ರಿಯೆಯಲ್ಲೂ ವಿಳಂಬ ಮಾಡಬಾರದು ಎಂದು ಹೇಳಿದರು.
ಭಾರತ್ ಜೋಡೋ ಯುವ ಸಂಘಗಳ ನೋಂದಣಿ, ಮೆಂಟರ್‌ಗಳ ನೇಮಕ ಹಾಗೂ ಸಂಘಗಳ ಪ್ರಾರಂಭಿಕ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದ ಅವರು, ಪ್ರಜಾಸೇವಾ ಅಭಿಯಾನದಲ್ಲಿ ಸ್ವೀಕರಿಸಲಾಗುವ ಪಹಣಿ ತಿದ್ದುಪಡಿ, ಪೋಡಿ, ಪಿಂಚಣಿ ಸೇರಿದಂತೆ ಕಂದಾಯ ಇಲಾಖೆಯ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ತಿಳಿಸಿದರು.
ಇದೇ ವೇಳೆ ಬಡವರಿಗೆ ನಿವೇಶನ ನೀಡುವ ಯೋಜನೆಗೆ ಅಗತ್ಯ ಭೂಮಿ ಗುರುತಿಸುವ ಕಾರ್ಯವನ್ನು ತಿಂಗಳಾಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
