ಕಿರುಕುಳ ನಿಲ್ಲಿಸದಿದ್ದರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ: ಕುಮಾರಸ್ವಾಮಿ ಎಚ್ಚರಿಕೆ
SIR ವಿಚಾರದಲ್ಲಿ ಜೆಡಿಎಸ್–ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ಆರೋಪ; ನಾಳೆ ಬೆಳಗ್ಗೆ 10 ಗಂಟೆವರೆಗೆ ಗಡುವು
ಬೆಂಗಳೂರು, ಅ.5: ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ದೂರು ದಾಖಲಿಸಿ ಪೊಲೀಸ್ ದಬ್ಬಾಳಿಕೆ ನಡೆಸುವುದನ್ನು ನಿಲ್ಲಿಸದಿದ್ದರೆ, ಮಂಗಳವಾರ ಬೆಳಗ್ಗೆ 10 ಗಂಟೆಯ ನಂತರ ರಾಜ್ಯದ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುವ ಚಳವಳಿ ನಡೆಸುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಅವರು, SIR ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಅನಗತ್ಯ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದರು.
ಫಾರಂ–7 ಸಲ್ಲಿಕೆ ಕಾನೂನುಬಾಹಿರವಲ್ಲ ಎಂಬುದನ್ನು ನ್ಯಾಯಾಲಯ ಸ್ಪಷ್ಟಪಡಿಸಿದೆ ಎಂದು ಹೇಳಿದ ಕುಮಾರಸ್ವಾಮಿ, ಈ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಪೊಲೀಸ್ ಇಲಾಖೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಅವರು, ರಾಜ್ಯ ಸರ್ಕಾರವು ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡದಿದ್ದರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುವ ಚಳವಳಿ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದ ಐಜಿ, ಡಿಜಿ ಹಾಗೂ ಪೊಲೀಸ್ ಕಮಿಷನರ್‌ಗಳು ತಮ್ಮ ಅಧೀನದ ಅಧಿಕಾರಿಗಳಿಗೆ ಕಾನೂನುಬದ್ಧವಾಗಿ ನಡೆದುಕೊಳ್ಳುವಂತೆ ಸೂಚನೆ ನೀಡಬೇಕು. ಇಲ್ಲವಾದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
ಸರ್ಕಾರವು ನೈಸ್, ಬಿಡದಿ ಟೌನ್‌ಶಿಪ್ ಹಾಗೂ ಕೆಪಿಎಸ್‌ಸಿ ವಿಚಾರಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಈ ಬೆಳವಣಿಗೆಗಳನ್ನು ಬಳಸುತ್ತಿದೆ ಎಂಬ ಆರೋಪವನ್ನೂ ಅವರು ಮಾಡಿದರು.
ಎಸ್‌ಐಆರ್ ವಿಚಾರದಲ್ಲಿ ಎಫ್‌ಐಆರ್‌ಗೆ ಚುನಾವಣಾ ಆಯೋಗದ ದೂರು ಅಗತ್ಯ: ಬೊಮ್ಮಾಯಿ
ಚುನಾವಣಾ ಆಯೋಗದ ದೂರು ಇಲ್ಲದೆ ಎಫ್‌ಐಆರ್ ದಾಖಲಿಸುವುದು ಕಾನೂನುಬಾಹಿರ: ಮಾಜಿ ಸಿಎಂ
ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ದೂರು ಇಲ್ಲದೆ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಎಸ್‌ಐಆರ್ ಹೆಸರಿನಲ್ಲಿ ಅನಗತ್ಯ ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಈ ಕುರಿತು ಎನ್‌ಡಿಎ ನಾಯಕರು ರಾಜ್ಯ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಚುನಾವಣಾ ಆಯೋಗದ ದೂರು ಇಲ್ಲದೆ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲ ಎಂದು ಆಯೋಗವೇ ಸ್ಪಷ್ಟಪಡಿಸಿದೆ. ಆದರೆ ಖಾಸಗಿ ವ್ಯಕ್ತಿಗಳ ದೂರುಗಳ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ದಾಖಲಿಸುತ್ತಿರುವ ಎಫ್‌ಐಆರ್‌ಗಳು ಕಾನೂನುಬಾಹಿರ ಎಂದು ಬೊಮ್ಮಾಯಿ ಹೇಳಿದರು.
ಫಾರ್ಮ್-6 ಅಥವಾ ಫಾರ್ಮ್-7 ಸೇರಿದಂತೆ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ಪೊಲೀಸರು ದೂರು ದಾಖಲಿಸದಂತೆ ಸೂಚನೆ ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮಾಹಿತಿ ಕೇಳಿರುವುದಾಗಿ ತಿಳಿಸಿದ್ದಾರೆ ಎಂದರು.
ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿತಂಡವಾದ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಟೀಕಿಸಿದರು. ಕಳೆದ ವರ್ಷ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿದ್ದ ಅವರು, ಇದೀಗ ಅಕ್ರಮ ಮತದಾರರ ಹೆಸರುಗಳನ್ನು ತೆಗೆದುಹಾಕಬಾರದು ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ಮತದಾರರ ಪಟ್ಟಿ ಶುದ್ಧೀಕರಣದಿಂದ ನಕಲಿ ಮತಗಳು ತೆಗೆದುಹಾಕಲ್ಪಡುತ್ತವೆ ಎಂಬ ಆತಂಕದಿಂದ ಕೆಲವರು ಚುನಾವಣಾ ಆಯೋಗದ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 2028ರ ಚುನಾವಣೆಯ ಕನಸು ಭಗ್ನವಾಗುವ ಆತಂಕವಿದೆ ಎಂದು ಬೊಮ್ಮಾಯಿ ಹೇಳಿದರು.
ಫಾರ್ಮ್-7 ಅರ್ಜಿಗಳನ್ನು ಗುಂಪಾಗಿ ಸಲ್ಲಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮತದಾರರ EPIC ಸಂಖ್ಯೆಗಳು ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ಬಂದಿರುವ ದೂರುಗಳನ್ನು ಚುನಾವಣಾ ಆಯೋಗ ಸ್ವೀಕರಿಸಿ ಪರಿಶೀಲನೆ ನಡೆಸಿದ ಬಳಿಕವೇ ಕ್ರಮ ಕೈಗೊಳ್ಳುತ್ತದೆ ಎಂದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಉಪಸ್ಥಿತರಿದ್ದರು.
