file 0000000099e482119c8e385e6d153bc8 200kb

ಪಾವಗಡ : ಕನ್ನಡದ ಅಸ್ಮಿತೆ ಉಳಿಸುವ ಜವಾಬ್ದಾರಿ ನಮ್ಮೆಲ್ಲರದು….!

DISTRICT NEWS ತುಮಕೂರು

ಕನ್ನಡದ ಅಸ್ಮಿತೆ ಉಳಿಸುವ ಜವಾಬ್ದಾರಿ ನಮ್ಮೆಲ್ಲರದು: ಶಾಸಕ ವೆಂಕಟೇಶ್

ಪಾವಗಡದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ – 19 ಸಾಧಕರಿಗೆ ಸನ್ಮಾನ

ಪಾವಗಡ: ಗಡಿನಾಡು ತಾಲ್ಲೂಕಾದ ಪಾವಗಡದಲ್ಲಿ ಕನ್ನಡ ಭಾಷೆ, ನಾಡು-ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಎಚ್.ವಿ. ವೆಂಕಟೇಶ್ ತಿಳಿಸಿದರು.

ಪಟ್ಟಣದ ಸರ್ಕಾರಿ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುವ ಗುರಿ ಹೊಂದಬೇಕು. ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಪ್ರೀತಿಯಿಂದ ಕಾಣಬೇಕು. ಕರ್ನಾಟಕ ರಾಜ್ಯವು ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಿದೆ. ದೇಶದ ಮೂಲೆ ಮೂಲೆಗಳಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಕನ್ನಡಿಗರು ಕನ್ನಡದ ಬಗ್ಗೆ ಅಭಿಮಾನ ಬೆಳೆಸಿಕೊಂಡಿದ್ದಾರೆ. ವಿದೇಶಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆಯುತ್ತಿರುವುದು ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತು ಕನ್ನಡಿಗರ ಅಭಿಮಾನಕ್ಕೆ ಸಾಕ್ಷಿಯಾಗಿದೆ ಎಂದರು.

ತಹಸೀಲ್ದಾರ್ ವೈ. ರವಿ ಮಾತನಾಡಿ, ಕರ್ನಾಟಕ ರಾಜ್ಯದ ಸ್ಥಾಪನೆಯು ಅನೇಕ ಹೋರಾಟಗಾರರ ತ್ಯಾಗ, ಪರಿಶ್ರಮ ಮತ್ತು ಹೋರಾಟದ ಫಲವಾಗಿದೆ. ಆಂಧ್ರಪ್ರದೇಶದ ಗಡಿಯಿಂದ ಸುತ್ತುವರಿದಿರುವ ಪಾವಗಡ ತಾಲ್ಲೂಕಿನಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ಮಾತನಾಡಿ, ನವೆಂಬರ್ 2ರಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ನೆಲ, ಜಲ ಮತ್ತು ಭಾಷೆಯ ಮಹತ್ವ ತಿಳಿಸುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನೂ ಆಯೋಜಿಸಲಾಗುವುದು ಎಂದು ತಿಳಿಸಿದರು.

19 ಸಾಧಕರಿಗೆ ಸನ್ಮಾನ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 19 ಸಾಧಕರನ್ನು ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಕನ್ನಡ ವಿಷಯದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಜಿ. ಸಿದ್ದರಾಮಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಧುಸೂದನ್, ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ, ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೇಶ್ ಬಾಬು, ಮಾಜಿ ಅಧ್ಯಕ್ಷ ಶಂಕರ್ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸಪ್ತಸ್ವರ ನ್ಯೂಸ್ | ಪಾವಗಡ

Leave a Reply

Your email address will not be published. Required fields are marked *