Saptasvara News Village Development Boost e1795179588874

Karnataka : ಹಳ್ಳಿಗಳ ಅಭಿವೃದ್ಧಿಗೆ ಸರ್ಕಾರದ ಬಂಪರ್ ಕೊಡುಗೆ: ₹16 ಸಾವಿರ ಕೋಟಿ ಅನುದಾನ…..!

Genaral STATE

ಹಳ್ಳಿಗಳ ಅಭಿವೃದ್ಧಿಗೆ ₹16 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್ ಘೋಷಣೆ

15 ಸಾವಿರ ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿ; ಮೊದಲ ಹಂತದಲ್ಲಿ 5 ಲಕ್ಷ ನಿವೇಶನ ಹಂಚಿಕೆ – ಬಡವರಿಗೆ 30×40 ಅಡಿ ನಿವೇಶನ

ಬೆಂಗಳೂರು, ನ.20: ರಾಜ್ಯದ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ನಗರಗಳತ್ತ ಜನರ ವಲಸೆಯನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ₹16 ಸಾವಿರ ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ’ ಹಾಗೂ ‘ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ’ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿ.ಮೀ. ರಸ್ತೆ ಅಭಿವೃದ್ಧಿಗೆ ₹10 ಸಾವಿರ ಕೋಟಿ ಹಾಗೂ ಪಂಚಾಯಿತಿ ಮಟ್ಟದ ಅಭಿವೃದ್ಧಿ ಕಾರ್ಯಗಳಿಗೆ ₹6 ಸಾವಿರ ಕೋಟಿ ಮೀಸಲಿಡಲಾಗಿದೆ. ಈ ಅನುದಾನ ಗುತ್ತಿಗೆದಾರರ ಜೇಬು ತುಂಬಿಸಲು ಅಲ್ಲ, ಗ್ರಾಮೀಣ ಜನರ ಬದುಕು ಬದಲಿಸಲು ನೀಡಲಾಗುತ್ತಿದೆ. ಅನುದಾನದ ಒಂದು ರೂಪಾಯಿಯೂ ದುರುಪಯೋಗವಾಗಬಾರದು. ಕಾಮಗಾರಿಗಳಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಡ್ಡಾಯ ಎಂದು ಅಧಿಕಾರಿಗಳಿಗೆ ಸೂಚಿಸಿದರು.

15 ಸಾವಿರ ಕಿ.ಮೀ. ರಸ್ತೆ ಅಭಿವೃದ್ಧಿಗೆ ₹10 ಸಾವಿರ ಕೋಟಿ

ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ರಸ್ತೆ ಮರುಡಾಂಬರೀಕರಣ, ಜಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಪ್ರತಿ ಕಿ.ಮೀ. ರಸ್ತೆ ಕಾಮಗಾರಿಗೆ ಅದರ ಸ್ವರೂಪಕ್ಕೆ ಅನುಗುಣವಾಗಿ ₹38 ಲಕ್ಷದಿಂದ ₹70 ಲಕ್ಷದವರೆಗೆ ವೆಚ್ಚ ಅಂದಾಜಿಸಲಾಗಿದೆ. ಈಗಾಗಲೇ ಪ್ರಗತಿ ಪಥ ಯೋಜನೆಯಡಿ ₹5 ಸಾವಿರ ಕೋಟಿ ಅನುದಾನ ನೀಡಲಾಗಿದೆ ಎಂದರು.

ಮೊದಲ ಹಂತದಲ್ಲಿ 5 ಲಕ್ಷ ನಿವೇಶನ ಹಂಚಿಕೆ

ರಾಜ್ಯದಲ್ಲಿ ಒಟ್ಟು 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳನ್ನು ವಿತರಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಸುಮಾರು 9 ಸಾವಿರ ಎಕರೆ ಜಮೀನು ಗುರುತಿಸಲಾಗಿದೆ. ನಿವೇಶನಗಳಿಗೆ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಬಡವರಿಗೆ 30×40 ಅಡಿ ನಿವೇಶನ

ಬಡವರಿಗೆ ನೀಡುವ ನಿವೇಶನಗಳ ಅಳತೆಯನ್ನು ಕನಿಷ್ಠ 30×40 ಅಡಿಗೆ ಹೆಚ್ಚಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ 20×30 ಅಡಿ ನಿವೇಶನ ನೀಡಲಾಗುತ್ತಿತ್ತು. ಕುಟುಂಬ ಬೆಳೆದಂತೆ ಮನೆ ನಿರ್ಮಾಣಕ್ಕೆ ಜಾಗದ ಕೊರತೆ ಎದುರಾಗಬಾರದು ಹಾಗೂ ಹೊಸ ಕೊಳಚೆ ಪ್ರದೇಶಗಳು ಸೃಷ್ಟಿಯಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯವಿದ್ದರೆ ನಿವೇಶನಗಳ ಸಂಖ್ಯೆಯನ್ನು ಕಡಿಮೆ ಮಾಡಿಯಾದರೂ ದೊಡ್ಡ ನಿವೇಶನ ನೀಡಲಾಗುವುದು. ಮನೆ ಅಥವಾ ನಿವೇಶನ ಇಲ್ಲದ ಕುಟುಂಬಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

ಕಾಮಗಾರಿಗಳ ಮೇಲೆ ನಿಗಾ: ಅಧಿಕಾರಿಗಳಿಗೆ ಎಚ್ಚರಿಕೆ

ಪ್ರತಿಯೊಂದು ಕಾಮಗಾರಿ ಆರಂಭಕ್ಕೂ ಮುನ್ನ ಹಾಗೂ ಪೂರ್ಣಗೊಂಡ ಬಳಿಕ ಛಾಯಾಚಿತ್ರ ಮತ್ತು ವಿಡಿಯೋಗಳನ್ನು ದಾಖಲಿಸಬೇಕು. ಕಾಮಗಾರಿ ನಡೆಯುವ ಸ್ಥಳದ ನಿಖರ ನಿರ್ದೇಶಾಂಕಗಳನ್ನು ಸಂಗ್ರಹಿಸಬೇಕು. ಟೆಂಡರ್ ಪ್ರಕ್ರಿಯೆ ಇಲ್ಲದೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವಂತಿಲ್ಲ. ಕಾಮಗಾರಿಗಳ ಪ್ರಗತಿಯನ್ನು ಮುಖ್ಯಮಂತ್ರಿ ಡ್ಯಾಶ್‌ಬೋರ್ಡ್ ಮೂಲಕ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ರಸ್ತೆಗಳು ಉತ್ತಮ ಸ್ಥಿತಿಯಲ್ಲಿದ್ದರೂ ಮತ್ತೆ ಅದೇ ರಸ್ತೆಗೆ ಅನುದಾನ ಖರ್ಚು ಮಾಡುವುದು, ಕಾಮಗಾರಿ ನಡೆಸದೆ ಬಿಲ್ ಪಡೆಯುವುದು ಸೇರಿದಂತೆ ಹಲವು ಅಕ್ರಮಗಳು ಗಮನಕ್ಕೆ ಬಂದಿವೆ. ಇಂತಹ ಅವ್ಯವಹಾರಗಳಿಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ನಗರಗಳತ್ತ ವಲಸೆ ತಡೆಯಲು ಹಳ್ಳಿಗಳ ಅಭಿವೃದ್ಧಿ

ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಜನರ ವಲಸೆ ಹೆಚ್ಚುತ್ತಿದೆ. ಉದ್ಯೋಗ, ಶಿಕ್ಷಣ ಹಾಗೂ ಉತ್ತಮ ಜೀವನದ ನಿರೀಕ್ಷೆಯಲ್ಲಿ ರೈತರ ಮಕ್ಕಳು ಊರು ತೊರೆಯುತ್ತಿದ್ದಾರೆ. ಈ ವಲಸೆಯನ್ನು ತಡೆಯಲು ಹಳ್ಳಿಗಳಲ್ಲಿಯೇ ಉತ್ತಮ ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕೆಗಳು ಮತ್ತು ಉದ್ಯಮಗಳ ಸ್ಥಾಪನೆಗೆ ಪಂಚಾಯಿತಿಗಳು ಸಹಕಾರ ನೀಡಬೇಕು. ಉದ್ಯಮ ಸ್ಥಾಪಿಸಲು ಮುಂದೆ ಬರುವವರಿಗೆ ಅನಗತ್ಯ ತೊಂದರೆ ನೀಡಬಾರದು. ಕರಾವಳಿ ಮತ್ತು ಮಲೆನಾಡು ಭಾಗಗಳ ಅಭಿವೃದ್ಧಿಗೂ ವಿಶೇಷ ನೀತಿ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಎರಡು ಕೋಟಿ ಜನರ ಆಸ್ತಿ ದಾಖಲೆ ಸಮಸ್ಯೆ ಪರಿಹಾರಕ್ಕೆ ಕ್ರಮ

ಭೂ ಗ್ಯಾರಂಟಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಆಸ್ತಿ ದಾಖಲೆಗಳನ್ನು ಸರಿಪಡಿಸಿ ಅರ್ಹರಿಗೆ ಖಾತಾ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ಜನರಿಗೆ ಎ-ಖಾತಾ, ಬಿ-ಖಾತಾ ಸೇರಿದಂತೆ ಆಸ್ತಿ ದಾಖಲೆಗಳ ಸಮಸ್ಯೆ ಪರಿಹರಿಸಲು ಅವಕಾಶವಿದೆ. ಪ್ರತಿ ಮನೆಗೂ ಭೇಟಿ ನೀಡಿ ಆಸ್ತಿಯ ಅಳತೆ, ಛಾಯಾಚಿತ್ರ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಖಾತಾ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

1,000 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್ಆರ್ ನೆರವು

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕನಿಷ್ಠ 3 ಸಾವಿರ ಪಂಚಾಯಿತಿ ಮಟ್ಟದ ಶಾಲೆಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ 1,000 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಕೈಗಾರಿಕೆಗಳು ಸಿಎಸ್ಆರ್ ಅನುದಾನದ ಮೂಲಕ ಶಾಲೆಗಳನ್ನು ದತ್ತು ಪಡೆದು ಕಟ್ಟಡ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ನೆರವಾಗಬೇಕು ಎಂದು ಮನವಿ ಮಾಡಿದರು.

ಕೆಟ್ಟುಹೋದ ಆರ್‌ಒ ಘಟಕಗಳ ದುರಸ್ತಿಗೆ ಸೂಚನೆ

ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಕೆಟ್ಟುಹೋಗಿರುವ ಆರ್‌ಒ ಘಟಕಗಳನ್ನು ತಕ್ಷಣ ದುರಸ್ತಿಗೊಳಿಸಬೇಕು. ಪ್ರತಿ ತಿಂಗಳು ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು. ಸಿಇಒಗಳು, ಇಒಗಳು ಹಾಗೂ ಪಿಡಿಒಗಳು ಈ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿ ಜನರಿಗೆ ಶುದ್ಧ ಕುಡಿಯುವ ನೀರು ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

ರೈತರಿಗೆ ಪರಿಹಾರ, ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ

ಬರಗಾಲದಿಂದ ರಾಜ್ಯದಲ್ಲಿ ಸುಮಾರು ₹60 ಸಾವಿರ ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ₹22 ಸಾವಿರ ಕೋಟಿ ಪರಿಹಾರ ಕೇಳಲಾಗಿದೆ. ರೈತರಿಗೆ ತಲಾ ₹5 ಸಾವಿರ ಪರಿಹಾರ ನೀಡುವ ನಿರ್ಧಾರ ಕೈಗೊಂಡಿದ್ದು, ಈಗಾಗಲೇ ಮೊದಲ ಹಂತದಲ್ಲಿ ₹2,500 ಬಿಡುಗಡೆ ಮಾಡಲಾಗಿದೆ. ಉಳಿದ ಮೊತ್ತವನ್ನು ಮುಂದಿನ ಹಂತದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ರೈತರಿಗೆ ವಿದ್ಯುತ್ ಸಬ್ಸಿಡಿ, ಕುಡಿಯುವ ನೀರು, ಪಿಂಚಣಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಿಗೂ ಸರ್ಕಾರ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದರು.

ಅಧಿಕಾರಿಗಳ ಮೇಲೆ ರಾಜಕೀಯ ಒತ್ತಡಕ್ಕೆ ಅವಕಾಶವಿಲ್ಲ

ಸಿಇಒಗಳು, ಇಒಗಳು, ಪಿಡಿಒಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಶಾಸಕರು ಅಥವಾ ಸಚಿವರಿಂದ ಅನಗತ್ಯ ಒತ್ತಡ ಬಂದರೆ ಜಿಲ್ಲಾಧಿಕಾರಿ ಅಥವಾ ಸಿಇಒಗಳ ಮೂಲಕ ಸರ್ಕಾರದ ಗಮನಕ್ಕೆ ತರಬಹುದು. ಅಧಿಕಾರಿಗಳು ಯಾರ ಭಯಕ್ಕೂ ಒಳಗಾಗದೆ ಕಾನೂನುಬದ್ಧವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಸಚಿವರು ಪ್ರತಿ ತಿಂಗಳು ಎರಡು ಬಾರಿ ತಾಲೂಕುಗಳಿಗೆ ಭೇಟಿ ನೀಡಬೇಕು. ಶಾಸಕರು ಹೋಬಳಿ ಮತ್ತು ಪಂಚಾಯಿತಿ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಬೇಕು. ತಾವು ಕೂಡ ಪ್ರತಿ ಶನಿವಾರ ಪ್ರಜಾಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಜನರ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಈಶ್ವರ ಬಿ. ಖಂಡ್ರೆ, ಬಸವಂತಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಎನ್.ಎಚ್. ಕೋನರೆಡ್ಡಿ, ರಹೀಂ ಖಾನ್, ಅಶೋಕ್ ಪಟ್ಟಣ್, ವೆಂಕಟಶಿವಾರೆಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ ತರನ್ನಮ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಪ್ತಸ್ವರ ನ್ಯೂಸ್, ಬೆಂಗಳೂರು

Leave a Reply

Your email address will not be published. Required fields are marked *