file 00000000e7748211bef6a93a67d96913 200kb

Karnataka : ಪೊಲೀಸರಿಗೆ ಸಿಎಂ ಖಡಕ್ ವಾರ್ನಿಂಗ್….!

CRIME Genaral STATE

# ಭ್ರಷ್ಟಾಚಾರಕ್ಕೆ ಶೂನ್ಯ ಸಹಿಷ್ಣುತೆ: ಪೊಲೀಸ್ ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

**ಪೊಲೀಸ್ ಠಾಣೆಗಳಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವಿಲ್ಲ**
**ಡ್ರಗ್ಸ್ ದಂಧೆಯಲ್ಲಿ ಪೊಲೀಸರೇ ಭಾಗಿಯಾದರೆ ಕಠಿಣ ಕ್ರಮ**
**ರೌಡಿ ಚಟುವಟಿಕೆ ನಿಯಂತ್ರಣಕ್ಕೆ ಪ್ರತ್ಯೇಕ ಕಮಿಷನರೇಟ್ – ಒಂದು ತಿಂಗಳಲ್ಲಿ ಫಲಿತಾಂಶ ನೀಡಲು ಗಡುವು**

**ಬೆಂಗಳೂರು:** ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭ್ರಷ್ಟಾಚಾರ, ಮಾದಕ ವಸ್ತುಗಳ ಹಾವಳಿ ಹಾಗೂ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಬೇಕು. ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ದಂಧೆಯ ಕೇಂದ್ರಗಳಾಗಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದ ನವೀಕೃತ ಸಭಾಂಗಣ ‘ಸಂಗಮ’ದಲ್ಲಿ ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

**ಬೆಂಗಳೂರಿನಲ್ಲಿ ಐದು ಪೊಲೀಸ್ ಕಮಿಷನರೇಟ್‌ಗಳ ರಚನೆ**

ಬೆಂಗಳೂರಿನ ಜನಸಂಖ್ಯೆ ಸುಮಾರು 1.5 ಕೋಟಿಗೆ ತಲುಪಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಐದು ಪ್ರತ್ಯೇಕ ಪೊಲೀಸ್ ಕಮಿಷನರೇಟ್‌ಗಳನ್ನು ಸ್ಥಾಪಿಸಲಾಗಿದೆ. ಐದು ಪೊಲೀಸ್ ಕಮಿಷನರ್‌ಗಳ ನೇಮಕದ ಜತೆಗೆ ನೂರಾರು ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಅಧಿಕಾರಿಗಳು ವೈಯಕ್ತಿಕವಾಗಿ ಕಾರ್ಯನಿರ್ವಹಿಸುವ ಬದಲು ‘ಟೀಂ ಬೆಂಗಳೂರು’ ಆಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಿಎಂ ಕರೆ ನೀಡಿದರು.

**ಡ್ರಗ್ಸ್ ದಂಧೆಯಲ್ಲಿ ಪೊಲೀಸರೇ ಭಾಗಿಯಾದರೆ ಕ್ರಮ**

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಸಂಕಲ್ಪವಾಗಿದೆ. ಮಾದಕ ವಸ್ತುಗಳ ದಂಧೆಯಲ್ಲಿ ಪೊಲೀಸರೇ ಭಾಗಿಯಾಗಿ ವಸೂಲಿಗೆ ಇಳಿಯುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಇಂತಹ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

**ರೌಡಿಗಳ ನಿಯಂತ್ರಣಕ್ಕೆ ಪ್ರತ್ಯೇಕ ಕಮಿಷನರೇಟ್**

ನಗರದಲ್ಲಿ ರೌಡಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವ ಉದ್ದೇಶದಿಂದ ಎಡಿಜಿಪಿ ಹಂತದ ಹಿರಿಯ ಅಧಿಕಾರಿಯ ನೇತೃತ್ವದಲ್ಲಿ ಪ್ರತ್ಯೇಕ ರೌಡಿ ನಿಗ್ರಹ ಕಮಿಷನರೇಟ್ ಸ್ಥಾಪಿಸಲಾಗಿದೆ. ಅಪರಾಧಿಗಳಿಗೆ ಪೊಲೀಸರ ಬಗ್ಗೆ ಭಯವಿರಬೇಕು. ನಾಗರಿಕರಿಗೆ ಪೊಲೀಸರ ಬಗ್ಗೆ ಗೌರವ ಮತ್ತು ವಿಶ್ವಾಸ ಮೂಡಬೇಕು ಎಂದರು.

**ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ**

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹರಡುವುದು, ದ್ವೇಷ ಭಾಷಣ ಮಾಡುವುದು ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನಗಳ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಸೈಬರ್ ಅಪರಾಧ ಮತ್ತು ಆನ್‌ಲೈನ್ ವಂಚನೆಗಳ ನಿಯಂತ್ರಣಕ್ಕೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸೂಚಿಸಿದರು.

**ರಾತ್ರಿ ಗಸ್ತು ಹೆಚ್ಚಿಸಲು ಸೂಚನೆ**

ಹಿರಿಯ ಪೊಲೀಸ್ ಅಧಿಕಾರಿಗಳು ನಿರಂತರವಾಗಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರಾತ್ರಿ ಗಸ್ತು ಹೆಚ್ಚಿಸಿ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಆರ್ಥಿಕ ಅಪರಾಧಗಳನ್ನು ನಿಯಂತ್ರಿಸಲು ಸಂಘಟಿತ ಪ್ರಯತ್ನ ನಡೆಸಬೇಕು. ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಜನತೆಗೆ ಪೊಲೀಸರ ಕಾರ್ಯವೈಖರಿಯಲ್ಲಿ ಸ್ಪಷ್ಟ ಫಲಿತಾಂಶ ಕಾಣುವಂತಾಗಬೇಕು ಎಂದು ಗಡುವು ನೀಡಿದರು.

**ಬೆಂಗಳೂರು ಭ್ರಷ್ಟಾಚಾರ ಮುಕ್ತ ನಗರವಾಗಬೇಕು**

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಬೆಂಗಳೂರು ಭ್ರಷ್ಟಾಚಾರ ಮುಕ್ತ ನಗರವಾಗಬೇಕು ಎಂಬುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಪೊಲೀಸ್ ಇಲಾಖೆಯ ಕೆಳಹಂತದವರೆಗೂ ಭ್ರಷ್ಟಾಚಾರ ನಡೆಯದಂತೆ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಯಾವುದೇ ಪ್ರಭಾವ ಅಥವಾ ಸಂಬಂಧಗಳಿಗೆ ಮಣಿಯದೆ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದರು.

**ಜಾತಿ ಸಂಘರ್ಷಕ್ಕೆ ಪ್ರಚೋದನೆ ಬೇಡ**

ಬಸವಣ್ಣನವರ ವಿಚಾರದಲ್ಲಿ ಜಾತಿ ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸುವ ಕೆಲಸ ಯಾರೂ ಮಾಡಬಾರದು. ಯಾವುದೇ ಸಮುದಾಯದ ವಿರುದ್ಧ ಸರ್ಕಾರ ನಡೆದುಕೊಳ್ಳುವುದಿಲ್ಲ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಸ್ಪಷ್ಟಪಡಿಸಿದರು.

ಸಪ್ತಸ್ವರ ನ್ಯೂಸ್ – ಬೆಂಗಳೂರು

Leave a Reply

Your email address will not be published. Required fields are marked *