ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ: ಹೆಚ್.ಡಿ. ಕುಮಾರಸ್ವಾಮಿ
ಹಿರಿಯೂರು, ಧಾರವಾಡ ಕ್ಷೇತ್ರಗಳಲ್ಲಿ ಒಮ್ಮತದ NDA ಅಭ್ಯರ್ಥಿ ಕಣಕ್ಕೆ; ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಮಿತಿ ರಚನೆಗೆ ನಿರ್ಧಾರ
ಬೆಂಗಳೂರು, ನವೆಂಬರ್ 26: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ತಾತ್ಕಾಲಿಕವಲ್ಲ. ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಯನ್ನು ದೀರ್ಘಕಾಲ ಮುಂದುವರಿಸುವುದರ ಜೊತೆಗೆ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಬೆಂಗಳೂರಿನಲ್ಲಿ ಗುರುವಾರ ನಡೆದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಭೆಯ ಬಳಿಕ ಮಾತನಾಡಿದ ಅವರು, ಎರಡೂ ಪಕ್ಷಗಳ ನಡುವೆ ಯಾವುದೇ ಮನಸ್ತಾಪ ಅಥವಾ ಗೊಂದಲಕ್ಕೆ ಅವಕಾಶ ನೀಡುವುದಿಲ್ಲ. ಮುಂಬರುವ ಉಪಚುನಾವಣೆ, ಜಿಬಿಎ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ತೋರಿದ ಒಗ್ಗಟ್ಟಿನ ರೀತಿಯಲ್ಲೇ ಕೆಲಸ ಮಾಡಲಾಗುವುದು ಎಂದರು.
ಹಿರಿಯೂರು, ಧಾರವಾಡದಲ್ಲಿ NDA ಅಭ್ಯರ್ಥಿಗಳು
ಹಿರಿಯೂರು ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿ ಎಂಬುದಕ್ಕಿಂತ ಎನ್‌ಡಿಎ ಅಭ್ಯರ್ಥಿಯ ಗೆಲುವೇ ಮುಖ್ಯ. ಎರಡೂ ಪಕ್ಷಗಳ ಒಮ್ಮತದೊಂದಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಲಾಗುವುದು ಎಂದು ಹೇಳಿದರು.
ಈ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಎನ್‌ಡಿಎ ಸಮನ್ವಯ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಈಗಿನ ಮುಖ್ಯ ವಿಚಾರವಲ್ಲ. ಕಾಂಗ್ರೆಸ್ ಅನ್ನು ಸೋಲಿಸಿ ಎನ್‌ಡಿಎಯನ್ನು ಅಧಿಕಾರಕ್ಕೆ ತರುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಬೆಳಗಾವಿ ಅಧಿವೇಶನದಲ್ಲಿ ಜನಪರ ವಿಚಾರಗಳಿಗೆ ಆದ್ಯತೆ
ರಾಜ್ಯ ಸರ್ಕಾರದ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಇದು ಕೇವಲ ಘೋಷಣೆಗಳಿಗೆ ಸೀಮಿತವಾದ ಸರ್ಕಾರವಾಗಿದೆ. ಯಾವುದೇ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ರಾಜ್ಯದಲ್ಲಿ ಇಂತಹ ಕೆಟ್ಟ ಆಡಳಿತವನ್ನು ಹಿಂದೆಂದೂ ಕಂಡಿರಲಿಲ್ಲ ಎಂದು ಟೀಕಿಸಿದರು.
ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಬೆಲೆ ಏರಿಕೆ ಸೇರಿದಂತೆ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಹಲವು ಜನಪರ ವಿಚಾರಗಳನ್ನು ಆದ್ಯತೆಯ ಮೇರೆಗೆ ಪ್ರಸ್ತಾಪಿಸಿ ಚರ್ಚಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿ-ಜೆಡಿಎಸ್ ಒಗ್ಗಟ್ಟಿನ ಮೂಲಕ ರಾಜ್ಯದಲ್ಲಿ ಎನ್‌ಡಿಎ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ.
