ಪಾವಗಡ–ತುಮಕೂರು ರಸ್ತೆಯಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ
ಕಣಿವೇನಹಳ್ಳಿ ಗೇಟ್ ಬಳಿ ಕಾರು–ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; ಅಪಘಾತಗಳ ತಾಣವಾಗಿರುವ ರಸ್ತೆಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ
ಪಾವಗಡ: ಪಾವಗಡ–ತುಮಕೂರು ರಸ್ತೆಯ ಕಣಿವೇನಹಳ್ಳಿ ಗೇಟ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ.
ಮೃತರನ್ನು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಗೊಲ್ಲಪಲ್ಲಿ ಗ್ರಾಮದ ಶ್ರೀನಿವಾಸ್ (45), ಮೇಘೇಶ್ (22) ಹಾಗೂ ಕೊಂಡಪಲ್ಲಿ ಗ್ರಾಮದ ನರಸಿಂಹಮೂರ್ತಿ (35) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಮಹಾಲಿಂಗಪ್ಪ (28), ತಿಪ್ಪೇಸ್ವಾಮಿ (25) ಹಾಗೂ ಮಹಾಲಿಂಗಪ್ಪ (27) ಅವರಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತರು ಪಾವಗಡ ತಾಲ್ಲೂಕಿನ ಪೋತಗಾನಹಳ್ಳಿಯಲ್ಲಿ ಗಾರೆ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಈ ವೇಳೆ ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪಾವಗಡ ಪಟ್ಟಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಗಳ ತಾಣವಾದ ಕಣಿವೇನಹಳ್ಳಿ ಗೇಟ್!
ಕಣಿವೇನಹಳ್ಳಿ ಗೇಟ್ ಬಳಿ ಪದೇಪದೇ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಈ ಸ್ಥಳದಲ್ಲಿ ಅಪಘಾತ ತಡೆಗೆ ಅಗತ್ಯ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಮತ್ತಷ್ಟು ಅಮಾಯಕ ಜೀವಗಳು ಬಲಿಯಾಗುವುದನ್ನು ತಡೆಯಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ : ಶ್ರೀನಿವಾಸಲು ಎ – ಪಾವಗಡ
